ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸುಜಾ ಕುಶಾಲಪ್ಪ, ಎಸ್.ಜೆ. ಸೋಮಶೇಖರ್, ಆರ್.ಎನ್. ಬಿಂದುಮಣಿ ಇದ್ದರು. 
ಕೊಡಗು

ಉದಾಸೀನ ತೋರಿದರೆ ನಿಯಮಾನುಸಾರ ಸೂಕ್ತ ಕ್ರಮ

ಮಡಿಕೇರಿ

ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು. ಕಾರ್ಯನಿರ್ವಹಣೆಯಲ್ಲಿ ಉದಾಸೀನ ತೋರಿದರೆ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಸೇರಿದಂತೆ ಹಲವು ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸುವುದು ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಮಡಿಕೇರಿ ನಗರದ ಕಸ ವಿಲೇವಾರಿ ವಿಷಯದಲ್ಲಿ ಇದುವರೆಗೆ ಯಾವುದೇ ಗಮನಾರ್ಹ ಪ್ರಗತಿ ಸಾಧಿಸದಿರುವುದಕ್ಕೆ ಸಂಸದರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಸಮಿತಿ ಸದಸ್ಯ ಆರ್.ಕೆ.ಚಂದ್ರು ಮಾತನಾಡಿ, ಕಸ ವಿಲೇವಾರಿ ಸಮಸ್ಯೆ ಬಗೆಹರಿಯದಿರುವುದು ಬೇಸರ ತಂದಿದೆ ಎಂದರು.

ಇದಕ್ಕೆ ಉತ್ತರಿಸಿದ ನಗರಸಭೆ ಎಇಇ ಸತೀಶ್, ಕಸ ವಿಲೇವಾರಿಗೆ ಟೆಂಡರ್‌ದಾರರು ಮುಂದೆ ಬಾರದ ಕಾರಣ ಮರು ಟೆಂಡರ್ ಆಹ್ವಾನಿಸಲಾಗುವುದು ಎಂದರು. ಈ ಕುರಿತು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಭರವಸೆ ನೀಡಿದರು. ಅಲ್ಲದೆ, ಕಸ ವಿಲೇವಾರಿಗೆ ಸಂಬAಧಿಸಿದAತೆ ಅಕ್ಟೋಬರ್ 23 ರಂದು ಸ್ಟೇಕ್ ಹೋಲ್ಡರ್‌ಗಳ ಸಭೆ ಕರೆಯಲಾಗಿದ್ದು, ಆಸಕ್ತರು ಭಾಗವಹಿಸಬಹುದು ಎಂದರು.

ಬಡವರು ಹಾಗೂ ನಿರ್ಗತಿಕರಿಗೆ ವಸತಿ ಒದಗಿಸುವ ಕುರಿತು ಮಾತನಾಡಿದ ಸಂಸದರು, ವಸತಿ ಯೋಜನೆ ಅನುಷ್ಠಾನದಲ್ಲಿ ಯಾವುದೇ ರಾಜಕಾರಣ ಮಾಡದೆ ಅರ್ಹ ಫಲಾನುಭವಿಗಳಿಗೆ ಮನೆ ಹಾಗೂ ನಿವೇಶನ ತಲುಪಿಸಬೇಕು ಎಂದು ಸಂಸದರು ಹೇಳಿದರು.

ಜಿಲ್ಲೆಯಲ್ಲಿ 2,873 ಮನೆಗಳ ನಿರ್ಮಾಣಕ್ಕೆ ಸರ್ವೆ ಕಾರ್ಯ ಮುಗಿದಿದ್ದು, ಕೆಲವೆಡೆ ನಿವೇಶನ ಇಲ್ಲದಿರುವುದು ಪ್ರಗತಿಗೆ ತೊಡಕಾಗಿದೆ ಎಂದು ವಸತಿ ಯೋಜನಾಧಿಕಾರಿ ಗಮನಕ್ಕೆ ತಂದರು. ಈ ಬಗ್ಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಿವೇಶನ ರಹಿತರಿಗೆ ನೀಡಲು ವಿವಿಧೆಡೆ ಭೂಮಿ ಗುರುತಿಸಲಾಗಿದ್ದು, ಶೀಘ್ರದಲ್ಲೇ ಜಾಗ ಹಂಚಿಕೆ ಮಾಡಿ ಮನೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಸಮಿತಿ ಸದಸ್ಯ ಡಾ.ನವೀನ್ ಕುಮಾರ್ ಹಾಗೂ ಆರ್.ಕೆ.ಚಂದ್ರು ಅವರು ಕರಡಿಗೋಡು ಸೇರಿದಂತೆ ವಿವಿಧ ಹಾಡಿಗಳಲ್ಲಿ ಇಂದಿಗೂ ಗುಡಿಸಲಿನಲ್ಲಿ ವಾಸಿಸುತ್ತಿರುವ ಆದಿವಾಸಿಗಳು ಮತ್ತು ಬಡವರಿಗೆ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಸೂಕ್ತ ಯೋಜನೆ ರೂಪಿಸಬೇಕು. ತೊಂದರೆ ನೀಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೂ ಒತ್ತು ನೀಡಬೇಕು ಎಂದು ಸಂಸದರು ಸೂಚಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ, ಸಂಘರ್ಷ ತಡೆಗೆ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ 3,015 ಪ್ರಕರಣಗಳಿಗೆ ಅಗತ್ಯ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಅರಣ್ಯ ಪ್ರದೇಶದ ಜನರನ್ನು ಕೆಲವು ಸಂಸ್ಥೆಗಳು ದಿಕ್ಕು ತಪ್ಪಿಸುತ್ತಿರುವ ಬಗ್ಗೆ ಮಾಹಿತಿ ಇದ್ದು, ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು ಎಂದು ಸಂಸದರು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾತನಾಡಿ, ಜಿಲ್ಲೆಯಲ್ಲಿ ಎಲ್-ನಿನೊ ಪರಿಣಾಮದಿಂದಾಗಿ ಮಳೆಯಾಗದೆ 60 ವರ್ಷಗಳ ನಂತರ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಭತ್ತದ ಬೆಳೆ ಒಣಗುತ್ತಿದ್ದು, ರೈತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಬೇಕು ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ತ್ವರಿತವಾಗಿ ನಡೆಯಬೇಕು ಎಂದು ಸೂಚಿಸಿದರು.

ನಗರದ ಎರಡು ಕಡೆ ನಿರ್ಮಿಸಲಾಗಿರುವ ಉದ್ಯಾನವನಗಳನ್ನು ಕೂಡಲೇ ಸಾರ್ವಜನಿಕ ಲೋಕಾರ್ಪಣೆಗೊಳಿಸಬೇಕು ಎಂದು ನಾಗೇಶ್ ಕುಂದಲ್ಪಾಡಿ ಒತ್ತಾಯಿಸಿದರು. ದಬ್ಬಡ್ಕದ 28 ಮನೆಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಲು ಹಾಗೂ ಪ್ರಧಾನಮಂತ್ರಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ವಿದ್ಯುತ್ ಒದಗಿಸಲು ಸಲಹೆ ನೀಡಲಾಯಿತು. ನಂಜರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಚಾರಿ ವಾಹನದ ಮೂಲಕ ವೈದ್ಯರ ಸೇವೆ ಕಲ್ಪಿಸುವುದು ಮತ್ತು ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸಲು ಸೂಚಿಸಲಾಯಿತು.

ಕೇಂದ್ರ ಸರ್ಕಾರದ ಸಭೆ-ಸಮಾರಂಭಗಳಲ್ಲಿ ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಹಾಡಬೇಕು ಎಂದು ಸಂಸದ ಯದುವೀರ್ ಒಡೆಯರ್ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು. ಇದೇ ವೇಳೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಕಾರ್ಯಕ್ರಮಗಳ ಮಾಹಿತಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.