ಸೋಮವಾರಪೇಟೆ: ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕರ್ನಾಟಕ ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವ-2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಸೋಮವಾರಪೇಟೆಯ ಸಾಹಿತಿ, ಕವಯತ್ರಿ ಜಲಜಾ ಶೇಖರ್ ಅವರಿಗೆ ’ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಜಲಜಾ ಶೇಖರ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅನೇಕ ಕೃತಿಗಳನ್ನು ರಚಿಸಿ ಹಾಗೂ ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ್ದಾರೆ. ಇತ್ತೀಚೆಗೆ ಐಗೂರಿನಲ್ಲಿ ಆಯೋಜಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿನ ಅವರ ಗಣನೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪೊಲೀಸ್ ಎಸ್ಪಿ ಕಮಾಂಡೆಂಟ್ ಹಮ್ಜಾ ಹುಸೇನ್ ಅವರು ಜಲಜಾ ಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಸುಭಾಷ್ ಗೌಡ, ಸುಭಾಸ್ ನಾರಾಯಣ ಗುರೂಜಿ, ಚಲನಚಿತ್ರ ನಟಿ ಮೈತ್ರಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆ ಶಿಕ್ಷಕಿ ಡಾ. ಭಾಗಿರಥಿ ಸೇರಿದಂತೆ ಹಲವು ಗಣ್ಯರು ಇದ್ದರು.