ಸೋಮವಾರಪೇಟೆ: ಕನ್ನಡ ಭಾಷೆಯ ಉಳಿವಿಗಾಗಿ ಸಂಘಟಿತ ಪ್ರಯತ್ನಗಳ ಅಗತ್ಯವಿದ್ದು, ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚಿಸುವ ಮೂಲಕ ಭಾಷೆ ಉಳಿಸಿ ಬೆಳೆಸಬೇಕಾಗಿದೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ಹೇಳಿದರು.
ಇಲ್ಲಿನ ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಪಿಎಂಶ್ರೀ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಇಂದು ಮಾನ್ಯತೆ ದೊರಕಿಸಲು ಹೋರಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡದ ಬಳಕೆ ಕಡಿಮೆಯಾಗುತ್ತಿದೆ. ನಿಸರ್ಗದ ತವರಾದ ಕೊಡಗಿನಲ್ಲಿ ನೆಲ, ಜಲ ಹಾಗೂ ಭಾಷೆಯ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕರೆ ನೀಡಿದರು.
ಮುಖ್ಯ ಭಾಷಣಕಾರ ಡಯಟ್ ನಿವೃತ್ತ ಹಿರಿಯ ಉಪನ್ಯಾಸಕ ಕೆ.ಎಸ್.ಶಿವಕುಮಾರ್ ಮಾತನಾಡಿ, ಕನ್ನಡಿಗರ ಔದಾರ್ಯದಿಂದಲೇ ಕನ್ನಡ ಭಾಷೆಯ ಬೆಳವಣಿಗೆಗೆ ಹಿನ್ನಡೆಯಾಗುತ್ತಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅನೇಕ ಕವಿಗಳು, ವಚನಕಾರರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಇಂದಿಗೂ ಜನಮಾನಸದಲ್ಲಿ ಉಳಿದಿದೆ. ಆದರೆ ಅನ್ಯ ಭಾಷಿಕರೊಂದಿಗೆ ವ್ಯವಹರಿಸುವಾಗ ಕನ್ನಡಿಗರೇ ಅನ್ಯ ಭಾಷೆಗಳನ್ನು ಬಳಸುತ್ತಿರುವುದರಿಂದ ಕನ್ನಡದ ಬಳಕೆ ಕ್ಷೀಣಿಸುತ್ತಿದೆ ಎಂದು ಬೇಸರಿಸಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಜೆನಿಫರ್ ತಾರಾ ಲೋಬೋ, ಅಂಗನವಾಡಿ ಸಹಾಯಕಿ ಹಸೀನ, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಅಡುಗೆ ಸಿಬ್ಬಂದಿ ಡಿ.ಎಸ್.ಅನಂತ್ಕುಮಾರ್ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶನಿವಾರಸಂತೆಯ ಲಾವಣ್ಯಾ ಮೋಹನ್ ಅವರನ್ನು ಸನ್ಮಾನಿಸಲಾಯಿತು.
ಎಸ್ಎಸ್ಎಲ್ಸಿಮತ್ತು ಪಿಯು ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ರಂಜಿತಾ ಹಾಗೂ ಎಸ್.ಪಿ.ತಶ್ಮಿಯಾ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಆದಮ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ನಡೆಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನಡೆಯಿತು.