ವಿರಾಜಪೇಟೆ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರು ವಹಿಸುವ ಪಾತ್ರ ಅತಿ ಪ್ರಮುಖವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪಾಲಕರು ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು.
ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪಾಲಕರು-ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಕರು ವಿದ್ಯಾರ್ಥಿಯನ್ನು ಕಾಲೇಜಿಗೆ ದಾಖಲು ಮಾಡಿದ ಕ್ಷಣ ಅವರ ಜವಾಬ್ದಾರಿ ಮುಗಿಯುವುದಿಲ್ಲ. ಬದಲಿಗೆ ಶೈಕ್ಷಣಿಕ ಅವಧಿಯಲ್ಲಿ ಮಕ್ಕಳ ಹಾಜರಾತಿ, ಪಡೆದ ಅಂಕಗಳು ಹಾಗೂ ಶೈಕ್ಷಣಿಕ ಪ್ರಗತಿಯನ್ನು ಆಗಾಗ್ಗೆ ಬಂದು ಪರಿಶೀಲನೆಯನ್ನು ಮಾಡುತ್ತಿರಬೇಕು ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯು ಪಾಲಕರ ಸಭೆಯ ಉದ್ದೇಶವಾಗಿದ್ದು, ಸಂಸ್ಥೆ ವತಿಯಿಂದ ಮೌಲ್ಯಯುತ ಶಿಕ್ಷಣವನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಪಠ್ಯೇತರ ವಿಷಯಗಳಲ್ಲಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ಪಾಲಕರು ಸಹ ಮನೆಯಲ್ಲಿ ತಮ್ಮ ಮಗುವಿನ ಶಿಕ್ಷಣದ ಕುರಿತು ಅವಲೋಕನವನ್ನು ಮಾಡಿದಾಗ ಮತ್ತು ಪ್ರೋತ್ಸಾಹಿಸಿದಾಗ ವಿದ್ಯಾರ್ಥಿಯು ಮತ್ತಷ್ಟು ಅಂಕಗಳನ್ನು ಗಳಿಸಿ ಒಂದು ಉತ್ತಮ ಸ್ಥಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸಂಸ್ಥೆಯು ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶ ಹೊಂದಿದ್ದು ಪಾಲಕರ ಅಭಿಪ್ರಾಯವನ್ನು ಸ್ವೀಕರಿಸಿ ಬೇಡಿಕೆಗೆ ಅನುಗುಣವಾಗಿ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಡಿಸೆಂಬರ್ ತಿಂಗಳಿನಲ್ಲಿ ವಿದ್ಯಾಸಂಸ್ಥೆಯ ದಿನಾಚರಣೆ ಹಾಗೂ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸರ್ವರೂ ಭಾಗವಹಿಸಿ ಎಂದು ಫಾ. ಮದಲೈ ಮುತ್ತು ಮನವಿ ಮಾಡಿದರು.
ಕಾಲೇಜಿನ ಕನ್ನಡ ಉಪನ್ಯಾಸಕ ಹೇಮಂತ್ ಮಾತನಾಡಿ, ಪಾಲಕರು ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಗ್ಗೆ ತಿಂಗಳಿಗೆ ಒಮ್ಮೆಯಾದರೂ ಕಾಲೇಜಿಗೆ ಆಗಮಿಸಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಜತೆ ಸಮಾಲೋಚನೆಯನ್ನು ಮಾಡಬೇಕು. ಹಾಜರಾತಿಯನ್ನು ಪರಿಶೀಲಿಸಬೇಕು. ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ಹೋಗಲು, ಗುಣಮಟ್ಟದ ಶಿಕ್ಷಣ ಪಡೆಯಲು ಪಾಲಕರ ಪಾತ್ರ ಹಾಗೂ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಪಾಲಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಿದರು. ಪಾಲಕರು ಸಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಗುಣವಾಗಿ ಸಲಹೆ ಸೂಚನೆಗಳನ್ನು ನೀಡಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಪಾಲಕರು ಉಪಸ್ಥಿತರಿದ್ದರು.