ಸೋಮವಾರಪೇಟೆ: ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಲ್ಲಿನ ಸ್ತ್ರೀ ಶಕ್ತಿ ಭವನದ ಸಭಾಂಗಣದಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಶುಕ್ರವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಡಿಕೇರಿಯ ಅತಿಥಿ ವೃಕ್ಷ ಶಿಕ್ಷ ಸಂಸ್ಥೆಯ ಸ್ಥ್ಥಾಪಕರಾದ ಶಾಲಿನಿ ಖನ್ನಾ ಚಾರ್ಲ್ಸ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು. ಸರ್ಕಾರ ಒದಗಿಸುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು. ಆಗ ಮಾತ್ರ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ನಿರುದ್ಯೋಗ ಎಂಬುದು ಸಮಸ್ಯೆಯಲ್ಲ. ಯಾವುದೇ ಉದ್ಯೋಗ ಪಡೆಯಬೇಕಾದರೆ ನಿರಂತರ ಶ್ರಮವೂ ಅಗತ್ಯ. ವಿದ್ಯಾರ್ಥಿಗಳು ಸೋಲಿಗೆ ಹೆದರಬೇಕಾಗಿಲ್ಲ. ಸೋಲೇ ಗೆಲುವಿನ ಸೋಪಾನ ಅನ್ನುವ ಹಾಗೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ ಅನೇಕ ನಿದರ್ಶನಗಳು ನಮ್ಮಲ್ಲಿವೆ. ಸ್ವಪ್ರಯತ್ನ, ಆತ್ಮವಿಶ್ವಾಸದಿಂದ ಎಲ್ಲವನ್ನೂ ಗಳಿಸಲು ಸಾಧ್ಯ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜು ಮಾತನಾಡಿ, ಕ್ಷೇತ್ರದ ಶಾಸಕರ ಪ್ರಯತ್ನದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಅನೇಕ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಶಿಕ್ಷಣವು ಜೀವನದಲ್ಲಿ ನಮ್ಮನ್ನು ಎಂದಿಗೂ ಕೈ ಬಿಡುವುದಿಲ್ಲ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉದ್ಯೋಗ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್, ಸುಮಾರು 10ಕ್ಕೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.