ಹೆಬ್ಬಾಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ನಡೆಸಲಾಯಿತು. ರವಿ ಕುಮಾರ್, ಲತಾ ಕುಮಾರಿ, ಶೈಲಜಾ, ಮಮತಾ ಮತ್ತಿತರರು ಇದ್ದರು. 
ಕೊಡಗು

ಹೆಬ್ಬಾಲೆಯಲ್ಲಿ ಪೋಷಣ್ ಅಭಿಯಾನ

ಕುಶಾಲನಗರ

ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬುಧವಾರ ಪೋಷಣ ಅಭಿಯಾನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕುಮಾರ್, ಗ್ರಾಮೀಣ ಭಾಗದ ಮಹಿಳೆಯರು ಮತ್ತು ಮಕ್ಕಳು ಉತ್ತಮ ಆರೋಗ್ಯ ಹೊಂದಲು ಪೌಷ್ಟಿಕ ಆಹಾರ ಸೇವನೆ ಅತ್ಯಗತ್ಯ. ಸರ್ಕಾರದ ಪೋಷಣ ಅಭಿಯಾನ ಯೋಜನೆಗಳ ಪ್ರಯೋಜನ ಪಡೆದುಕೊಂಡು ಸುದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಲತಾ ಕುಮಾರಿ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ತಮ್ಮ ಹಾಗೂ ಮಗುವಿನ ಆರೈಕೆ ವಿಚಾರದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು. ಆರ್‌ಕೆಎಸ್‌ಕೆ ಆಪ್ತ ಸಮಾಲೋಚಕಿ ಶೈಲಜಾ ಮಾತನಾಡಿ, ಹದಿಹರೆಯದವರ ಆರೋಗ್ಯ ನಿರ್ವಹಣೆ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮತಾ ಮಾತನಾಡಿ, ಇಲಾಖೆಯಿಂದ ದೊರೆಯುವ ಗೃಹಲಕ್ಷ್ಮಿ ಹಾಗೂ ಮಾತೃ ವಂದನಾ ಯೋಜನೆಗಳ ಸೌಲಭ್ಯಗಳ ಬಗ್ಗೆ ವಿವರಿಸಿದರು. ಆರೋಗ್ಯ ನಿರೀಕ್ಷಕ ಸಂಜಯ್ ಮಾತನಾಡಿ, ಶಿಶು ಮರಣ ಪ್ರಮಾಣವನ್ನು ಸಂಪೂರ್ಣವಾಗಿ ತಡೆಯಲು ಪ್ರತಿ ಅಂಗನವಾಡಿ ಕೇಂದ್ರ ಮಟ್ಟದಲ್ಲೂ ತಾಯಿ ಮತ್ತು ಮಗುವಿನ ಆರೋಗ್ಯ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ನಾಲ್ವರು ಗರ್ಭಿಣಿಯರಿಗೆ ಸಾಂಪ್ರದಾಯಿಕವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿ, ಶುಭ ಹಾರೈಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯ ಮುಖಂಡರಾದ ಸರಸ್ವತಿ ವಹಿಸಿದ್ದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ್,

ಅಂಗನವಾಡಿ ಕಾರ್ಯಕರ್ತೆಯರಾದ ವನಜಾಕ್ಷಿ, ಸುಧಾ ಹೆಬ್ಬಾಲೆ ಸೇರಿದಂತೆ ಕೂಡಿಗೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.