ಸರ್ಕಾರಿ ಶಾಲೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ತಹಸೀಲ್ದಾರ್ ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಹೆಚ್.ಎಸ್.ಚೇತನ್, ಕೃಷ್ಣಪ್ಪ, ಎಚ್.ಜೆ.ಕುಮಾರ್ ಇತರರಿದ್ದರು. 
ಕೋಲಾರ

ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ: ಚೇತನ್

ಆದರ್ಶ್. ಎಂ.ಕೆ.

ಪ್ರಮುಖ ಮುಖ್ಯಾಂಶಗಳು

  • ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ: ಚೇತನ್

ಕುಶಾಲನಗರ: ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಹೆಬ್ಬಾಲೆ ಸರ್ಕಾರಿ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದು ಎಲ್ಲಾ ಶಿಕ್ಷಕರು ಒತ್ತಡದ ನಡುವೆಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ತಮ್ಮ ಸಂಪೂರ್ಣ ಶ್ರಮವಹಿಸಿ ಜವಾಬ್ದಾರಿಯುತವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ದೈಹಿಕ ಸದೃಢತೆ ಇದ್ದರೆ ಮಾತ್ರ ಕೆಲಸ ಉತ್ತಮವಾಗಿ ನಡೆಯಲು ಸಾಧ್ಯ. ಹೀಗಾಗಿ ಎಲ್ಲಾ ಶಿಕ್ಷಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಂತಹ ಕ್ರೀಡಾಕೂಟಗಳ ಸದುಪಯೋಗ ಪಡೆದುಕೊಳ್ಳಬೇಕು. ವರ್ಷವಿಡೀ ಒತ್ತಡದಲ್ಲಿ ದುಡಿಯುವ ಶಿಕ್ಷಕರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಆರೋಗ್ಯವಂತರಾಗಿರಲು ಸಾಧ್ಯ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಸಾಮರ್ಥ್ಯವನ್ನು ತೋರಿಸಬಹುದು. ಸೋಲು-ಗೆಲುವು ಮುಖ್ಯವಲ್ಲ. ಮುಕ್ತ ಮನಸ್ಸಿನಿಂದ ಕ್ರೀಡೆ ಮತ್ತು ಕಲೆಗಳನ್ನು ಪ್ರಸ್ತುತಪಡಿಸುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಕೃಷ್ಣಮೂರ್ತಿ, ಸ್ವಾತಂತ್ರ್ಯ ಪೂರ್ವದಲ್ಲೇ ಮಹಿಳೆಯರ ಸಾಕ್ಷರತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಾತೆ ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳು ಸರ್ವಕಾಲಕ್ಕೂ ಅನುಕರಣೀಯ ಎಂದ ಅವರು, ಶಿಕ್ಷಕರು ವರ್ಷವಿಡೀ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತೀರಿ. ಆದರೆ, ಇಂದು ಒಂದು ದಿನ ಒತ್ತಡವನ್ನು ಮರೆತು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ನಿತ್ಯದ ಕೆಲಸದ ಒತ್ತಡದಿಂದ ಹೊರಬರಲು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ, ಶಿಕ್ಷಕರು ಹೆಚ್ಚಿನ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ಅದರಿಂದ ಹೊರಬರಲು ಕ್ರೀಡೆಗಳು ಸಹಕಾರಿಯಾಗಿವೆ. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಕ್ಷಕರಲ್ಲಿರುವ ಸುಪ್ತ ಕೌಶಲ್ಯ ಹೊರಹಾಕಲು ಇದು ಉತ್ತಮ ವೇದಿಕೆಯಾಗಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಎಲ್ಲಾ ಶಿಕ್ಷಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಜೆ.ಕುಮಾರ್, ಪ್ರಾಥಮಿಕ ಶಾಲಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಕುಮಾರ್, ಕೆ.ಆರ್.ರತ್ನಕುಮಾರ್, ಎಚ್.ಎಸ್.ಮಂಜುನಾಥ್, ಸೈಜನ್ ಪೀಟರ್, ಉದ್ಯಮಿಗಳಾದ ಗಿರೀಶ್ ಮಲ್ಲಪ್ಪ, ಆದಂ, ಭಾಷಾ, ಎಚ್.ಎಸ್.ರಘು, ಕೆ.ಟಿ.ಬಸವರಾಜ್, ಜಯಕುಮಾರ್, ಕವಿತಾ, ರಮೇಶ್, ಟಿ.ಆರ್.ಬಸವರಾಜ್ ಶೆಟ್ಟಿ, ವಿಜಯ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.