ಕೊಳ್ಳೇಗಾಲ: ಸಾರ್ವಜನಿಕರ ಕೆಲಸ ಮಾಡಿಕೊಡದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಶನಿವಾರ ಸಾರ್ವಜನಿಕರು ನೀಡಿದ 22 ಅಹವಾಲು ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು. ಜನ ಸಾಮಾನ್ಯರ ಸಮಸ್ಯೆ ಆಲಿಸಲು ಪ್ರತಿ ತಿಂಗಳು ಕ್ಷೇತ್ರ ವ್ಯಾಪ್ತಿಯ ಯಳಂದೂರು, ಕೊಳ್ಳೇಗಾಲದಲ್ಲಿ ಅಹವಾಲು ಸ್ವೀಕರಿಸುತ್ತೇನೆ. ಸಾರ್ವಜನಿಕರ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಪಟ್ಟಣದ ಪ್ರಮುಖ ರಸ್ತೆಗಳು ಗುಂಡಿ ಬಿದ್ದು ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದೇನೆ. ಜರೂರಾಗಿ ಸಭೆ ಕರೆದು ರಸ್ತೆ ದುರಸ್ತಿಗೆ ಕ್ರಮವಹಿಸುವಂತೆ ನಗರಸಭೆಗೆ ಸೂಚಿಸಲಾಗುವುದು. ತಾಲೂಕಿನ ಉತ್ತಂಬಳ್ಳಿ ಗ್ರಾಮದ ಹೆದ್ದಾರಿ ದುರಸ್ತಿಗೆ ಕ್ರಮ ಕ್ರಮವಹಿಸುತ್ತೇನೆ ಎಂದರು.
ಮುಡಿಗುಂಡ ಸೇತುವೆ ಶಿಥಿಲಗೊಂಡಿರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದಿದ್ದೆ. ಇತ್ತೀಚೆಗಷ್ಟೇ ಜಿಲ್ಲಾಧಿಕಾರಿಗಳು ಸೇತುವೆ ವೀಕ್ಷಣೆ ಮಾಡಿದ್ದಾರೆ. ಅಧಿಕಾರಿಗಳಿಗೆ ಸೇತುವೆ ನಿರ್ಮಾಣ ಸಾಮರ್ಥ್ಯ ಹಾಗೂ ಗುಣಮಟ್ಟ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು. ಉಪವಿಭಾಗಧಿಕಾರಿ ಮಹೇಶ್, ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್, ಸಿಡಿಪಿಒ ನಂಜಮಣಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಕಾರ್ಯದರ್ಶಿ ರವಿ ಸೇರಿದಂತೆ ಕಾಂಗ್ರೆಸ್ ಮುಖಂಡರಿದ್ದರು.