ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ.
ಸೃಜನಶೀಲ ಚಿಂತನೆಗಳು ಮತ್ತು ಚಟುವಟಿಕೆಗಳು ಸಂತೋಷದಾಯಕ ಕಲಿಕೆಗೆ ಸಹಕಾರಿಯಾಗಿದ್ದು, ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಎಂದು ಕಲಾವಿದ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ ಹೇಳಿದರು.
ತಾಲೂಕಿನ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್‌ನಿಂದ ಹಮ್ಮಿಕೊಂಡಿದ್ದ ರಂಗಭೂಮಿ ಮತ್ತು ವ್ಯಕ್ತಿ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ರಂಗಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ರಂಗ ಚಟುವಟಿಗಳು ನಡೆದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯವಾಗುತ್ತದೆ. ಯುವ ಸಮುದಾಯದಲ್ಲಿ ರಂಗಕಲೆಯನ್ನು ಪ್ರೋತ್ಸಾಹಿಸಲು ರಂಗಾಯಣ, ನಿನಾಸಂ ಮುಂತಾದ ಸಂಸ್ಥೆಗಳು ನಿರಂತರವಾಗಿ ಕಾರ್ಯನಿವರ್ಹಿಸುತ್ತಿವೆ ಎಂದರು.
ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ. ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯಾಭಿರುಚಿ ಮತ್ತು ಕಲಾಭಿವ್ಯಕ್ತಿಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕರಾದ ನಾಗಪ್ಪಗೌಡ, ಅಮೃತವರ್ಷಿಣಿ, ಹೇಮಾವತಿ, ವಿನುತಾ, ಕಲ್ಪನಾ, ಕೇಶವಮೂರ್ತಿ, ನಂದಕುಮಾರ್ ಇದ್ದರು.