ಡಿಸಿ ಎಸ್.ವಿಕಾಸ್ ಕಿಶೋರ್ 
ಜಿಲ್ಲೆ

1500 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಘಟಕ ನಿರ್ಮಾಣ - ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್

Koppal

ಕೊಪ್ಪಳ: ನಗರದ ಜಿಲ್ಲಾಸ್ಪತ್ರೆ ಹಾಗೂ ಗಂಗಾವತಿ ತಾಲೂಕು ಆಸ್ಪತ್ರೆಗೆ ಹೊಸ ಆಮ್ಲಜನಕ ಉತ್ಪಾದನಾ ಘಟಕಗಳು ಮಂಜೂರಾಗಿವೆ. ಈ ಕುರಿತ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 15 ದಿನದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬಳಿಕ ಆಕ್ಸಿಜನ್ ಕೊರತೆ ಪ್ರಮಾಣ ತಗ್ಗಲಿದೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಒಂದು ಸಾವಿರ ಹಾಗೂ ಗಂಗಾವತಿಯಲ್ಲಿ 500 ಲೀಟರ್ಸ್‌ ಪರ್ ಮಿನಿಟ್ (ಎಲ್‌ಪಿಎಂ) ಸಾಮರ್ಥ್ಯದ ಆಕ್ಸಿಜನ್ ಪ್ಲಾೃಂಟ್‌ಗಳನ್ನು ನಿರ್ಮಿಸಲಾಗುತ್ತಿದೆ. ಈ ಘಟಕಗಳ ನಿರ್ಮಾಣದಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಗ್ರಾಪಂ ಮಟ್ಟದ ಶಾಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಆರಂಭಿಸಲಾಗಿದೆ. 400ಕ್ಕೂ ಹೆಚ್ಚು ಸೋಂಕಿತರು ಕೋವಿಡ್ ಕೇರ್ ಸೆಂಟರ್‌ಗಳಿಗೆ ಆಗಮಿಸಿದ್ದಾರೆ. ಇನ್ನೂ 1500 ಸೋಂಕಿತರನ್ನು ಸ್ಥಳಾಂತರಿಸಬೇಕಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮನೆಯವರಿಗೆ ಹಾಗೂ ನೆರೆ ಮನೆಯವರಿಗೆ ಸೋಂಕು ಹರಡದಂತೆ ನೋಡಿಕೊಳ್ಳುವುದು ಸೋಂಕಿತರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಹತ್ತಿರದ ಕೇರ್ ಸೆಂಟರ್‌ಗೆ ದಾಖಲಾಗಬೇಕು. ಆರೈಕೆ ಕೇಂದ್ರದಲ್ಲಿ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ಕೋವಿಡ್‌ನಿಂದ ಪಾಲಕರು ಮೃತಪಟ್ಟು ಮಕ್ಕಳು ಅನಾಥವಾಗಿರುವ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅಂತಹ ಪ್ರಕರಣ ಕಂಡುಬಂದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾಲನಾ ಕೇಂದ್ರಗಳಿಗೆ ಮಕ್ಕಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಡಿಎಚ್‌ಒ ಡಾ.ಟಿ.ಲಿಂಗರಾಜ ಇದ್ದರು.