ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ . 
ಜಿಲ್ಲೆ

ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ; ಡಿಸಿ ಎಸ್.ವಿಕಾಸ್ ಕಿಶೋರ್ ಹೇಳಿಕೆ

Koppal

ಕೊಪ್ಪಳ: ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಇದ್ದು, ಇದುವರೆಗೆ ಆಮ್ಲಜನಕದ ಕೊರತೆ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.

ನಗರದಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕದಿಂದ ಜಿಲ್ಲೆಯ ಯಾವುದೇ ಆಸ್ಪತ್ರೆಗೆ ಮೂರು ಗಂಟೆಯಲ್ಲಿ ಆಮ್ಲಜನಕ ಪೂರೈಸಬಹುದಾಗಿದೆ. ರಾಜ್ಯದ ಇತರ ಜಿಲ್ಲೆಗಳಿಗೂ ನಗರದಿಂದಲೇ ಆಕ್ಸಿಜನ್ ಪೂರೈಸಲಾಗುತ್ತಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 29 ವೆಂಟಿಲೇಟರ್ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 16 ಬಳಕೆಯಲ್ಲಿವೆ. ಅಗತ್ಯಕ್ಕೆ ಅನುಗುಣವಾಗಿ ಉಳಿದ ವೆಂಟಿಲೇಟರ್‌ಗಳನ್ನು ಬಳಕೆ ಮಾಡಲಾಗುವುದು. ವೆಂಟಿಲೇಟರ್ ನಿರ್ವಹಣೆಗೆ ತಜ್ಞರಿದ್ದು, ರೋಗಿಗಳನ್ನು ಸಮರ್ಪಕವಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಕ್ಸಿಜನ್ ಅಥವಾ ವೆಂಟಿಲೇಟರ್ ಸಮಸ್ಯೆಯಿಂದ ಜಿಲ್ಲೆಯಲ್ಲಿ ಕೋವಿಡ್ ಸಾವು ಸಂಭವಿಸಿಲ್ಲ. ಮೃತಪಟ್ಟಿರುವ ಸೋಂಕಿತರಿಗೆ ಇತರ ಗಂಭೀರ ಕಾಯಿಲೆಗಳಿದ್ದವು. ಜನರು ರೋಗ ಲಕ್ಷಣ ಕಾಣಿಸಿಕೊಂಡ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 230 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್ ಐಸೋಲೇಷನ್‌ಗೆ ಅವಕಾಶ ಇಲ್ಲದವರಿಗೆ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗುವುದು. ಜನರು ನಿರ್ಭೀತಿಯಿಂದ ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಕರೊನಾ ವೈರಸ್‌ನಿಂದ ರಕ್ಷಣೆ ಪಡೆಯಬಹುದು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಡಿಎಚ್‌ಒ ಡಾ.ಟಿ.ಲಿಂಗರಾಜ, ವೈದ್ಯಕೀಯ ಅಧೀಕ್ಷಕ ವೇಣುಗೋಪಾಲ ಇದ್ದರು.