ದೆಹಲಿಯಲ್ಲಿ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ಶುಕ್ರವಾರ ಕೊಪ್ಪಳದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. 
ಜಿಲ್ಲೆ

ರೈತರ ಮೇಲಿನ ದಬ್ಬಾಳಿಕೆ ನಿಲ್ಲಲಿ - ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

ಕೊಪ್ಪಳ: ಕೃಷಿ ಕಾಯ್ದೆ ಜಾರಿ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡಸಿದರು.

ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ರೈತಾಪಿ ವರ್ಗ ಸಾಕಷ್ಟು ಸಂಕಷ್ಟ ಎದುರಿಸಲಿದೆ. ಇದನ್ನು ಖಂಡಿಸಿ ಕಳೆದೊಂದು ವಾರದಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಪ್ರತಿಭಟನಾನಿರತರ ಮೇಲೆ ಲಾಠಿ ಚಾರ್ಜ್ ನಡೆಸಿ ಹೆದರಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಇದನ್ನು ದೇಶದ ಪ್ರತಿಯೊಬ್ಬ ರೈತರು ಖಂಡಿಸುತ್ತಾನೆಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರೈತರ ಮೇಲಿನ ದಬ್ಬಾಳಿಕೆ ನಿಲ್ಲಿಸಬೇಕು. ಶಾಂತಿಯುತ ಪ್ರತಿಭಟನೆಗೆ ಅನುವು ಮಾಡಿಕೊಡಬೇಕು. ರೈತರಿಗೆ ಮಾರಕವಾಗಿರುವ ಭೂಸ್ವಾದೀನ ಕಾಯ್ದೆ, ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕ ಕಾಯ್ದೆ, ಬೀಜ ಕಾಯ್ದೆಗಳನ್ನು ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಸಂಘಟನೆ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಹೊಳೆಯಾಚೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ನಾಲಬಂದ್, ತಾಲೂಕು ಅಧ್ಯಕ್ಷ ಶ್ರೀನಿವಾಸ ಭೋವಿ, ಹನುಮಂತಪ್ಪ, ಯಮನೂರಪ್ಪ ಇತರರಿದ್ದರು.