ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕೊಪ್ಪಳ ಪ್ರತಿಭಟನೆ ನಡೆಸಲಾಯಿತು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ, ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಕಾಡಾ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ ಇದ್ದರು.
- ಕಾಂಗ್ರೆಸ್ ನಾಯಕರ ವಾಗ್ದಾಳಿ
- ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕೊಪ್ಪಳ : ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್&ಡೀಸೆಲ್ ದರ ಹೆಚ್ಚಳ, ಅಡುಗೆ ಅನಿಲದ ಬೆಲೆ ಏರಿಕೆ ಹಾಗೂ ರೈತರಿಗೆ ರಸಗೊಬ್ಬರ ಕೊರತೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಬಳಿಕ ಬಸವೇಶ್ವರ ವೃತ್ತದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ಕಟ್ಟಿಗೆ ಒಲೆ ಹಚ್ಚಿ ನೀರು ಕಾಯಿಸುವ ಮೂಲಕ ಸಂಕೇತಾತ್ಮಕವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪೆಟ್ರೋಲ್-&ಡೀಸೆಲ್ ದರ ಇಳಿಕೆ, ರೂಪಾಯಿ ಮೌಲ್ಯ ಹೆಚ್ಚಳ ಸೇರಿದಂತೆ ಹಲವು ಭರವಸೆಗಳನ್ನು ನೀಡಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ಜನರಿಗೆ ಮೋಸ ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡವರು, ರೈತರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.
ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರಗಳು ನಿರಂತರವಾಗಿ ಏರಿಕೆಯಾಗಿವೆ. ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದೊರೆಯುತ್ತಿಲ್ಲ. ಬೆಲೆ ಏರಿಕೆ ವಿರುದ್ಧ ಜನರು ಸಂಘಟಿತ ಹೋರಾಟ ನಡೆಸಿದರೆ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳಲಿದೆ ಎಂದು ಹೇಳಿದರು.
ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ ಮಾತನಾಡಿ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಕಾರಣವಾಗಿವೆ ಎಂದು ಆರೋಪಿಸಿದರು. ಇಂಧನ ಹಾಗೂ ನೀರಿನ ಬಳಕೆಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧವೂ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ದಿನನಿತ್ಯದ ಬಳಕೆಯ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಈ ಸಮಸ್ಯೆಗಳಿಗೆ ಪರಿಹಾರ ಬೇಕಾದರೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ಹೇಳಿದರು.
ಕಾಡಾ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ, ಪ್ರಮುಖರಾದ ಮಂಜುನಾಥ ಜಿ. ಗೊಂಡಬಾಳ, ಅಮ್ಜದ ಪಟೇಲ್, ಯಂಕಣ್ಣ ಯರಾಶಿ, ಲಿಂಗೇಶ ಇತರರಿದ್ದರು