ಯಲಬುರ್ಗಾ ತಾಪಂ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ ಮಾತನಾಡಿದರು. ಜಿಪಂ ಎಡಿಪಿಸಿ ಮಹಾಂತಸ್ವಾಮಿ, ತಾಪಂ ಇಒ ನೀಲಗಂಗಾ ಬಬಲಾದ, ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಡಿಐಇಸಿ ಶ್ರೀನಿವಾಸ ಚಿತ್ರಗಾರ, ಎಸ್‌ಬಿಎಂ ಅಧಿಕಾರಿ ಮಾರುತಿ ಇದ್ದರು. 
ಕೊಪ್ಪಳ

ಪ್ಲಾಸ್ಟಿಕ್ ಬಳಸದಂತೆ ಜನರಲ್ಲಿ ಜಾಗೃತಿ ಮೂಡಿಸಿ

ಶಾಮಸುಂದರ್ ಕೊಪ್ಪಳಕರ್
ಯಲಬುರ್ಗಾ: ಗ್ರಾಮೀಣ ಪ್ರದೇಶಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಎಲ್ಲ ಗ್ರಾಪಂಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕಿನ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪ್ಲಾಸ್ಟಿಕ್‌ಮುಕ್ತ ಜಿಲ್ಲೆಯಾಗಿಸಲು ಸರ್ಕಾರ ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿದ್ದು, ಗ್ರಾಪಂಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ 15 ದಿನಗಳಿಗೊಮ್ಮೆ ವಿಲೇವಾರಿ ಮಾಡಬೇಕು. ಹಾನಿಕಾರಕ ಪ್ಲಾಸ್ಟಿಕ್ ಬಳಸದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಆರಂಭವಾಗಿದ್ದು, ಪ್ರತಿದಿನ ಗ್ರಾಮ ಮಟ್ಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪಿಡಿಒಗಳು, ಗ್ರಾಪಂ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಜನಪ್ರತಿನಿಧಿಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಸಹಭಾಗಿತ್ವದಲ್ಲಿ ನಿರಂತರ ಸ್ವಚ್ಛತಾ ಕಾರ್ಯ ನಡೆಸಬೇಕು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸುವ ವ್ಯವಸ್ಥೆಯನ್ನು ಎಲ್ಲ ಗ್ರಾಪಂಗಳಲ್ಲಿ ಕಡ್ಡಾಯವಾಗಿ ಅನುಸರಿಸಬೇಕು. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕಗಳ ಸಮರ್ಪಕ ನಿರ್ವಹಣೆಗೆ ಗಮನಹರಿಸಬೇಕು ಎಂದು ಸೂಚಿಸಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಗೃಹ ನಿರ್ಮಾಣ ಪ್ರಗತಿ, ಬಾಕಿ ಕಾಮಗಾರಿಗಳ ಸ್ಥಿತಿ, ಘನತ್ಯಾಜ್ಯ ನಿರ್ವಹಣಾ (ಎಸ್‌ಡಬ್ಲುೃಎಂ) ಘಟಕಗಳ ಕಾರ್ಯನಿರ್ವಹಣೆ, ಗ್ರಾಮೀಣ ನೈರ್ಮಲ್ಯ ಕಾರ್ಯಕ್ರಮ ಅನುಷ್ಠಾನ ಸೇರಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಯಿತು. ನರೇಗಾ ಯೋಜನೆಯಡಿ ಜಲ ಸಂರಕ್ಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಮಾಹಿತಿ ಪಡೆದು ನಿಗದಿತ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಜಿಪಂ ಎಡಿಪಿಸಿ ಮಹಾಂತಸ್ವಾಮಿ, ಡಿಐಇಸಿ ಶ್ರೀನಿವಾಸ ಚಿತ್ರಗಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಎಸ್‌ಬಿಎಂ ಅಧಿಕಾರಿ ಮಾರುತಿ, ಪಿಡಿಒಗಳು, ವಿವಿಧ ಇಲಾಖೆ ಸಿಬ್ಬಂದಿ ಇದ್ದರು.