ಕೊಪ್ಪಳ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡಿದರು. ಸಂಸದ ರಾಜಶೇಖರ ಹಿಟ್ನಾಳ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಇದ್ದರು.
- ಡಾ.ಸುರೇಶ ಇಟ್ನಾಳ ಸೂಚನೆ
- ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
ಕೊಪ್ಪಳ : ರಸ್ತೆ ಅಪಘಾತಗಳನ್ನು ತಡೆಗಟ್ಟಲು ಶಾಲೆ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಕಾನೂನುಗಳ ಕುರಿತು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಡಿಸಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಿದಾಗ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತದೆ. ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಗತ್ಯವಿರುವ ಕಡೆ ಸೂಚನಾ ಫಲಕಗಳು, ಬೀದಿ ದೀಪಗಳು ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಅಗತ್ಯ ಅನುದಾನಕ್ಕಾಗಿ ಸಂಬಂಧಿತ ಇಲಾಖೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.
ಬ್ಲ್ಯಾಕ್ ಸ್ಪಾಟ್ಗಳು ಹಾಗೂ ಅಪಘಾತ ಹೆಚ್ಚಾಗಿ ಸಂಭವಿಸುವ ಪ್ರದೇಶಗಳಲ್ಲಿ ಗುಣಮಟ್ಟದ ಸಿಸಿ ಟಿವಿ ಕ್ಯಾಮೆರಾ, ಬೆಳಕಿನ ವ್ಯವಸ್ಥೆ ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆಗಳಲ್ಲಿ ಬ್ಯಾರಿಕೇಡ್ಗಳ ಉದ್ದೇಶ ಪೂರ್ಣಗೊಂಡ ಬಳಿಕ ರೋಡ್ ಹಂಪ್ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಟ್ರ್ಯಾಕ್ಟರ್ಗಳನ್ನು ಮಾನವ ಸಾಗಣೆಗೆ ಬಳಸುವುದನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಇತ್ತೀಚೆಗೆ ಮುನಿರಾಬಾದ್ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಗಂಭೀರವಾಗಿದ್ದು, ಟ್ರ್ಯಾಕ್ಟರ್ಗಳನ್ನು ಸರಕು ಸಾಗಣೆಗೆ ಮಾತ್ರ ಬಳಸಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಜಪ್ತಿ ಮಾಡುವಂತೆ ಸೂಚಿಸಿದರು.
ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಟ್ರ್ಯಾಕ್ಟರ್ ಅಪಘಾತ ಸಂಭವಿಸಿದ ಪ್ರದೇಶಗಳಲ್ಲಿ ರಸ್ತೆ ಮತ್ತು ಸೇತುವೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಹೊಸಪೇಟೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ವಲಯ ಸೂಚನಾ ಫಲಕ ಹಾಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಹಾಗೂ ಅತಿವೇಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಪಿ.ಹೇಮಂತರಾಜ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಕೆ., ಎನ್.ಎಚ್. 50 ಹೊಸಪೇಟೆ ಸೈಟ್ ಇಂಜಿನಿಯರ್ ದಾನೇಶ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜು ಇತರರಿದ್ದರು.