ಗಂಗಾವತಿ ಶ್ರೀ ಚನ್ನಮಲ್ಲಿಕಾರ್ಜುನ ಪುರಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 3ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹೆಬ್ಬಾಳ ಬೃಹನ್ಮಠದ ಶ್ರೀ ನಾಗಭೂಷಣ ಶಿವಾಚಾರ್ಯರು ಬುಧವಾರ ಮಾತನಾಡಿದರು. ಮಾಜಿ ಶಾಸಕ ಪರಣ್ಣಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ ಇತರರಿದ್ದರು. 
ಕೊಪ್ಪಳ

ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ

ಕುರುವತ್ತಿ ಶ್ರೀಕಾಂತಪ್ಪ

ಪ್ರಮುಖ ಮುಖ್ಯಾಂಶಗಳು

  • ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಅನಿಸಿಕೆ
  • 3ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಗಂಗಾವತಿ: ಸಾಮೂಹಿಕ ಮದುವೆಗಳು ಸಾಮರಸ್ಯ ಹೆಚ್ಚಿಸುತ್ತಿದ್ದು, ಸಮಾನತೆ ಆದರ್ಶಗಳನ್ನು ತಿಳಿಸುತ್ತಿವೆ ಎಂದು ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಹೇಳಿದರು.
ನಗರದ ಶ್ರೀ ಚನ್ನಮಲ್ಲಿಕಾರ್ಜುನ ಪುರಾಣ ಮಂಟಪದಲ್ಲಿ ಶ್ರೀ ಚನ್ನಮಲ್ಲಿಕಾರ್ಜುನ ಟ್ರಸ್ಟ್ ಕಮಿಟಿ, ಶ್ರೀ ಚನ್ನಬಸವಸ್ವಾಮಿ ಕಲ್ಯಾಣ ಮಂಟಪ, ಪುರಾಣ, ಸೇವಾ ಸಮಿತಿ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ 3ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ಮದುವೆ ಪೂರಕವಾಗಿದ್ದು, ನವಜೋಡಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ದಾಸೋಹ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಒತ್ತು ನೀಡಿರುವ ಶ್ರೀಮಠ, ಸಾಮೂಹಿಕ ಮದುವೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಬಡ ಕುಟುಂಬಗಳಿಗೆ ನೆರವಾಗಿದೆ ಎಂದರು.
17 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದವು. ಅರಳಹಳ್ಳಿಯ ಗವಿಸಿದ್ದಯ್ಯ ಸ್ವಾಮೀಜಿ, ಸುಳೇಕಲ್ ಬೃಹನ್ಮಠದ ಪದ್ಮಾಕ್ಷರಯ್ಯ ಸ್ವಾಮೀಜಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ಕಾಡಾ ಮಾಜಿ ಅಧ್ಯಕ್ಷರಾದ ಎಚ್.ಎಸ್.ಗಿರೇಗೌಡ ಇತರರಿದ್ದರು.