ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಆಗಸ್ಟ್ 10ರಂದಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಪೋಸ್ಟರ್ನ್ನು ಎಡಿಸಿ ಸಿದ್ರಾಮೇಶ್ವರ ಬಿಡುಗಡೆಗೊಳಿಸಿದರು.
- ಎಡಿಸಿ ಸಿದ್ರಾಮೇಶ್ವರ ಸೂಚನೆ
- ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ
ಕೊಪ್ಪಳ : ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಯಾವುದೇ ಮಗು ಜಂತುನಿವಾರ ಮಾತ್ರೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಎಡಿಸಿ ಸಿದ್ರಾಮೇಶ್ವರ ಸೂಚಿಸಿದರು.
ಆಗಸ್ಟ್ 10ರಂದಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಂತುರಹಿತ ಮಗು ದೇಶದ ಸಂಪತ್ತು, ಮಕ್ಕಳ ಆರೋಗ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ. ಆಗಸ್ಟ್ 10ರಂದು ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ, ಆರೋಗ್ಯವಂತ ಸಮಾಜ ನಿಮಾರ್ಣಕ್ಕೆ ಪ್ರತಿಯೊಬ್ಬರು ಕೈಜೋಡಿಸಿ ಎಂದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪ್ರಕಾಶ್ ವಿ. ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಜಿಲ್ಲೆಯ 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ವಿತರಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ-&ಖಾಸಗಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಮೂಲಕ ಆಗಸ್ಟ್ 10ರಂದು ಮಾತ್ರೆ ನೀಡಲಾಗುತ್ತಿದ್ದು, ಅಂದು ಗೈರುಹಾಜರಾಗುವ ಮಕ್ಕಳಿಗೆ ಆಗಸ್ಟ್ 17ರಂದು ಮರು ಅವಕಾಶ ಕಲ್ಪಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ನೀಡಲಾಗುವುದು. ಸಣ್ಣ ಮಕ್ಕಳಿಗೆ ಮಾತ್ರೆಯನ್ನು ನೀರಿನಲ್ಲಿ ಕರಗಿಸಿ ಕುಡಿಸಲು ಸೂಚಿಸಲಾಗಿದ್ದು, ಜಂತುಬಾಧೆ, ಅಪೌಷ್ಟಿಕತೆ ಮತ್ತು ರಕ್ತಹಿನತೆ ತಡೆಗಟ್ಟಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುವ ಉದ್ದೇಶದಿಂದ ಪ್ರತಿ ಆರು ತಿಂಗಳಿಗೊಮ್ಮೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್ ಹೆಚ್., ಜಿಲ್ಲಾ ಕ್ಷಯರೋಗ ನಿಮೂರ್ಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಇತರರಿದ್ದರು.