ಯಲಬುರ್ಗಾ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ ಮಾತನಾಡಿದರು. ಶಿರಸ್ತೇದಾರ್ ದೇವರಡ್ಡಿ, ಪಪಂ ನೌಕರರಾದ ವನರಾಜ, ಈರಣ್ಣ ಬಳೂಟಗಿ ಇದ್ದರು.
- ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ ಸೂಚನೆ
- ಪೂರ್ವಭಾವಿ ಸಭೆ
ಯಲಬುರ್ಗಾ: ರಾಜ್ಯ ಸರ್ಕಾರದ ನಿರ್ದೇಶನದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಿ, ತಾಲೂಕು ಮಟ್ಟದ ವೇದಿಕೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ ಹೇಳಿದರು.
ತಹಸಿಲ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಪ್ಪಣ್ಣ ಅವರು ಸಮಾಜದಲ್ಲಿ ಸಮಾನತೆ, ಶ್ರಮ, ಮಾನವೀಯತೆ ಹಾಗೂ ಸಾಮಾಜಿಕ ಸಾಮರಸ್ಯದ ಮೌಲ್ಯಗಳನ್ನು ಸಾರಿದ್ದಾರೆ. ಅವರ ಆದರ್ಶಗಳು ಪ್ರೇರಣೆಯಾಗಿದ್ದು, ಜಯಂತಿ ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರ ಚಿಂತನೆಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸಬೇಕು.
ಜು.29ರಂದು ನಡೆಯಲಿರುವ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿವ ನೀರು, ಸ್ವಚ್ಛತೆ, ಆಸನ ವ್ಯವಸ್ಥೆ, ಸಂಚಾರ ಇತರೆ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಎಲ್ಲರೂ ಕೈಜೋಡಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದರು. ಶಿರಸ್ತೇದಾರ್ ದೇವರಡ್ಡಿ, ಪಪಂ ನೌಕರರಾದ ವನರಾಜ, ಈರಣ್ಣ ಬಳೂಟಗಿ ಇತರರಿದ್ದರು.