ಕೊಪ್ಪಳದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಿಷನ್ ಶಕ್ತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಡಾ. ಸುರೇಶ್ ಬಿ. ಇಟ್ನಾಳ ಮಾತನಾಡಿದರು. ನ್ಯಾ. ಮಹಾಂತೇಶ ಎಸ್. ದರಗದ, ಜಿಪಂ ಸಿಇಒ ವರ್ಣಿತ್ ನೇಗಿ ಇದ್ದರು.
- ಡಿಸಿ ಡಾ. ಸುರೇಶ ಇಟ್ನಾಳ ಸೂಚನೆ
- ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುವ ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಘಟಕಗಳು ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಿಷನ್ ಶಕ್ತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮಿಷನ್ ಶಕ್ತಿ ಯೋಜನೆ ಮಹಿಳೆಯರನ್ನು ರಾಷ್ಟ್ರ ನಿಮಾರ್ಣದಲ್ಲಿ ಸಮಾನ ಪಾಲುದಾರರನ್ನಾಗಿಸುವ ಉದ್ದೇಶ ಹೊಂದಿದೆ. ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಬೇಟಿ ಬಚಾವೋ ಬೇಟಿ ಪಢಾವೋ, ನಾರಿ ಅದಾಲತ್, ಶಕ್ತಿ ಸದನ, ಪಾಲನಾ ಕೇಂದ್ರಗಳು, ಮಹಿಳಾ ಸಬಲೀಕರಣ ಘಟಕ, ಸಖಿ ನಿವಾಸ್ ಹಾಗೂ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ. ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸಿ ಸಮನ್ವಯದಿಂದ ಕೆಲಸ ಮಾಡಬೇಕು. ಜಾಗೃತಿ ಕಾರ್ಯಕ್ರಮ ಹಾಗೂ ಸಾಮರ್ಥ್ಯಾಭಿವೃದ್ಧಿ ತರಬೇತಿಗಳನ್ನು ಗುರಿಯನುಸಾರ ನಡೆಸಬೇಕು. ಕರ್ತವ್ಯ ಲೋಪ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಬಲೀಕರಣ ಘಟಕಗಳ ಎಲ್ಲ ಸಿಬ್ಬಂದಿಗೆ ಸರಿಯಾದ ತರಬೇತಿ ಆಗಬೇಕು. ಆಯಾ ಸಿಬ್ಬಂದಿಯ ಕಾರ್ಯವೈಖರಿ ಬಗ್ಗೆ ಮಾಹೆವಾರು ಪರಿಶೀಲನೆ ನಡೆಸಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನ ಮಾಡಬೇಕು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಅಧಿಕಾರಿ ಯಮುನಾ ಮಾತನಾಡಿ, ಏಪ್ರಿಲ್ 2025ರಿಂದ ಮಾರ್ಚ್ 2026ರವರೆಗೆ 11 ಕೌಟುಂಬಿಕ ದೌರ್ಜನ್ಯ, 10 ಲೈಂಗಿಕ ಅಪರಾಧ, 39 ಪೋಕ್ಸೊ, 2 ಬಾಲ್ಯ ವಿವಾಹ, 19 ಕಾಣೆಯಾದ ಹಾಗೂ 3 ಇತರೆ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಇತರರಿದ್ದರು.