ಕೊಪ್ಪಳ : ರಾಜ್ಯದ ಒಂದು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಮತ್ತೊಂದು ಭಾಗದಲ್ಲಿ ಬರದ ವಾತಾವರಣ ನಿಮಾರ್ಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆಗೆ 40 ಸಾವಿರ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಡ್ಯಾಂಗಳಲ್ಲಿ ನೀರಿಲ್ಲ, ರೈತರು ಬಿತ್ತನೆ ಮಾಡಬೇಡಿ ಎಂದು ನೀಡಿದ ಹೇಳಿಕೆ ರೈತರ ಆತ್ಮವಿಶ್ವಾಸ ಕುಗ್ಗಿಸುವಂತಿದೆ ಎಂದು ಟೀಕಿಸಿದರು. ಮಳೆ ನಂಬಿ ಈಗಾಗಲೇ ಬಿತ್ತನೆ ಮಾಡಿರುವ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದು, ಅವರಿಗೆ ಸೂಕ್ತ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡುವುದರ ಜತೆಗೆ ಖಾಸಗಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ರೈತರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಕಾರ್ರ್ಖಾನೆಗಳ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಈ ಬಗ್ಗೆ ಗಂಭೀರ ನಿರ್ಧಾರ ಕೈಗೊಳ್ಳುತ್ತಿಲ್ಲ. ವಿಷಕಾರಿ ಹೊಗೆ ಉಗುಳುತ್ತಿರುವ ಕಾರ್ಖಾನೆಗಳಿಂದ ರೈತರಿಗೆ ಅಪಾರ ಹಾನಿಯಾಗುತ್ತಿದೆ. ಈ ಕುರಿತು ಗವಿಸಿದ್ದೇಶ್ವರ ಸ್ವಾಮೀಜಿ ಕೂಡ ಸರ್ಕಾರದ ಗಮನ ಸೆಳೆದಿದ್ದರೂ ಯಾವುದೇ ಕ್ರಮವಾಗಿಲ್ಲ. ವಿಷಕಾರಿ ಕಾರ್ಖಾನೆಗಳನ್ನು ತಕ್ಷಣ ಬಂದ್ ಮಾಡಿ, ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ರಾಜ್ಯ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಂಘದ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಮಾತನಾಡಿ, ಪ್ರತಿ ವರ್ಷ ರೈತರಿಗೆ ಅನ್ಯಾಯವಾಗುತ್ತಿದ್ದು, ಯಾವುದೇ ಸರ್ಕಾರ ರೈತರಿಗೆ ಸಮರ್ಪಕ ನ್ಯಾಯ ಒದಗಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೈತ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸುಖಮುನಿಯಪ್ಪ, ಮುಖಂಡರಾದ ಶರಣಪ್ಪ ಮರಳಿ, ಕಿಶನ್ ನಂದಿ ಇತರರಿದ್ದರು.