ಕನಕಗಿರಿ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕುಡಿವ ನೀರಿನ ಟಾಸ್ಕ್‌ಫೋರ್ಸ್ ಸಭೆಯಲ್ಲಿ ನೋಡಲ್ ಅಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ಸಿಡಿಪಿಒ ವಿರೂಪಾಕ್ಷಿ ಇತರರಿದ್ದರು.
- ನೋಡಲ್ ಅಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಸೂಚನೆ
ಕನಕಗಿರಿ: ಬೇಸಿಗೆಯಲ್ಲಿ ನೀರಿನ ಅಭಾವ ಆಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಿಡಿಒಗಳು ಗ್ರಾಪಂ ವ್ಯಾಪ್ತಿಯಲ್ಲಿ ದಿನಕ್ಕೊಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಕ್ಷೇತ್ರದ ನೋಡಲ್ ಅಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಸೂಚಿಸಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಗ್ರಾಪಂ ಪಿಡಿಒಗಳು, ಗ್ರಾಕುನೀ ಯೋಜನೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಯೊಂದಿಗಿನ ಕುಡಿವ ನೀರಿನ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ನೀರಿನ ಅಭಾವವಾಗದಂತೆ ಕ್ರಮ ಕೈಗೊಳ್ಳಲು ಸಭೆ ನಡೆಸಿ ಸೂಚಿಸಿದ್ದಾರೆ. ಸಚಿವರ ಸ್ವ ಕ್ಷೇತ್ರವಾದ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಕಂದಾಯ, ಗ್ರಾಕುನೀ ಹಾಗೂ ಆರ್‌ಡಿಪಿಆರ್‌ನವರು ಸಹಯೋಗದೊಂದಿಗೆ ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ನೀರಿನ ಅಭಾವದ ದೂರು ಬಂದ ತಕ್ಷಣ ಕ್ರಮಕ್ಕೆ ಮುಂದಾಗಬೇಕು. ಎಲ್ಲ ಗ್ರಾಪಂ ಪಿಡಿಒಗಳು ಕೇಂದ್ರ ಸ್ಥಾನದಲ್ಲಿದ್ದು, ಕೆಲಸ ನಿರ್ವಹಿಸಬೇಕು. ಯಾವುದೇ ರೀತಿಯಲ್ಲಿ ಬೇಜವಾಬ್ದಾರಿತನ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಸಹಾಯವಾಣಿಗೆ ಕರೆಗಳನ್ನು ಸ್ವೀಕರಿಸಿ ಸಮಸ್ಯೆ ಅರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನೀರಿನ ಅಭಾವ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದಲ್ಲಿ ಗಮನಹರಿಸಿ ಕ್ರಮಕೈಗೊಂಡು ಸಮಸ್ಯೆ ಇತ್ಯರ್ಥಪಡಿಸಬೇಕು. ಖುದ್ದು ಸಹಾಯವಾಣಿಗೆ ಕರೆ ಮಾಡಿ ಸಿಬ್ಬಂದಿ ಕಾರ್ಯವೈಖರಿಯ ಬಗ್ಗೆ ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಮಸ್ಯೆಯಿರುವ ಬೊಮ್ಮಸಾಗರ ತಾಂಡಾ, ಗೋಡಿನಾಳ ಗ್ರಾಮಗಳಿಗೆ ತಾಪಂ ಇಒ ಅವರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಿದರು.
ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ಣ ಕಟ್ಟಿಮನಿ, ಗ್ರಾಕುನೀ ವಿಭಾಗದ ಎಇಇ ದೇವಣ್ಣ ಕಟ್ಟಿಮನಿ, ಪಿಡಿಒಗಳಾದ ನಾಗೇಶ ಪೂಜಾರ, ಕನಕಪ್ಪ, ಲಕ್ಷ್ಮಣ ನಾಯಕ, ಅಮರೇಶ ರಾಥೋಡ್, ಬಸವರಾಜ ಸಂಕನಾಳ, ಚಂದೂಸ್ವಾಮಿ ಇತರರಿದ್ದರು.