ಕೊಪ್ಪಳ : ಜಿಲ್ಲೆಯಿಂದ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಭೂಮರಡ್ಡಿ ಹೇಳಿದರು.
ನೂತನ ಸಚಿವರಾದ ಬಸವರಾಜ ರಾಯರಡ್ಡಿ ಹಾಗೂ ಶಿವರಾಜ್ ತಂಗಡಗಿಗೆ ಅಭಿನಂದನೆ ಸಲ್ಲಿಸಿ. ಜಿಲ್ಲೆ ಸಮಸ್ಯೆಗಳ ಬಗ್ಗೆ ಅವರಿಗೆ ಸಮರ್ಪಕ ಅರಿವು ಇರುವುದರಿಂದ ಬರ ಪರಿಸ್ಥಿತಿ, ತುಂಗಭದ್ರಾ ನೀರಿನ ಸಮಸ್ಯೆ ಹಾಗೂ ರೈತರ ಸಂಕಷ್ಟಗಳಿಗೆ ತುರ್ತು ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು. ಕೈಗಾರಿಕೆಗಳಿಂದ ಉಂಟಾಗಿರುವ ಸಮಸ್ಯೆಗಳು, ಹದಗೆಟ್ಟಿರುವ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹೆಚ್ಚಿನ ಯೋಜನೆಗಳನ್ನು ತಂದು ಜನರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.