ಕನಕಗಿರಿ ಪಪಂ ಸದಸ್ಯ ಸಿದ್ದೇಶ ಕಲುಬಾಗಿಲಮಠ ಅವರಿಗೆ ತಹಸೀಲ್ದಾರ್ ಚಂದ್ರಶೇಖರ ಗಾಳಿ ಮಂಗಳವಾರ ಎಸ್‌ಐಆರ್ ಅರ್ಜಿ ವಿತರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ತಾಪಂ ಇಒ ರಾಜಶೇಖರ ಇತರರಿದ್ದರು.
ಕನಕಗಿರಿ: ಮತದಾರರ ಪಟ್ಟಿಯನ್ನು ನಿಖರ ಹಾಗೂ ಪಾರದರ್ಶಕವಾಗಿಡುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕ್ಕರಣೆ (ಎಸ್‌ಐಆರ್) ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ ಹಾಗೂ ಮತದಾರರಿಗೆ ಗಣತಿ ನೋಂದಣಿ ಅರ್ಜಿ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಸ್‌ಐಆರ್ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳು ಇತರ ಅನರ್ಹ ಮತದಾರರನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಜೂ.30ರಿಂದ ಜು.29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್‌ಐಆರ್ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು ಎಂದರು.
ಇದಕ್ಕೂ ಮುನ್ನ ಪಟ್ಟಣದ ಕೆಪಿಎಸ್ ಕಾಲೇಜು ಸಭಾಂಗಣದಲ್ಲಿ ಬಿಎಲ್‌ಒ, ಬಿಎಲ್‌ಎ ಹಾಗೂ ಮೇಲ್ವಿಚಾರಕರಿಗೆ ಎಸ್‌ಐಆರ್ ಕುರಿತು ಪ್ರಾರಂಭಿಕ ತರಬೇತಿ ನೀಡಲಾಯಿತು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ‌್ಯಾಲಿ ನಡೆಸಿ ಜಾಗೃತಿ ಮೂಡಿಸಲಾಯಿತು. ತಾಪಂ ಇಒ ಕೆ.ರಾಜಶೇಖರ, ತಹಸೀಲ್ದಾರ್ ಚಂದ್ರಶೇಖರ ಗಾಳಿ, ಪಪಂ ಮುಖ್ಯಾಧಿಕಾರಿ ಲಕ್ಷಣ ಕಟ್ಟಿಮನಿ ಇತರರಿದ್ದರು.