ಕೊಪ್ಪಳದಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳು -2026ರ ಕುರಿತು ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡಿದರು. ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಇದ್ದರು.
- ಡಿಸಿ ಡಾ. ಸುರೇಶ ಇಟ್ನಾಳ ಸೂಚನೆ
- ನಗರ, ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳ ಸಭೆ
ಕೊಪ್ಪಳ : ಸುಪ್ರೀಂ ಕೋರ್ಟ್ನ ಆದೇಶದನುಸಾರ ಜಿಲ್ಲೆ ಎಲ್ಲಾ ನಗರ- ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಸ್ತು ವಿಲೇವಾರಿಗೆ ಸೂಕ್ತ ಕ್ರಮ ಕೈಗೊಂಡು, ತ್ಯಾಜ್ಯ ಸಂಸ್ಕರಿಸದವರಿಗೆ ನೀರು, ವಿದ್ಯುತ್ ಸ್ಥಗಿತಗೊಳಿಸಲು ಅಗತ್ಯ ಕ್ರಮ ಜರುಗಿಸುವಂತೆ ಡಿಸಿ ಡಾ. ಸುರೇಶ ಬಿ. ಇಟ್ನಾಳ ಸೂಚಿಸಿದ್ದಾರೆ.
ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳು -2026ರ ಕುರಿತು ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರವು 2026ರ ಏಪ್ರಿಲ್ 1ರಿಂದ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಜಾರಿಗೆ ತಂದಿದ್ದು, ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳು ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಸಂಬಂಧ ಜಿಲ್ಲಾ ಮಟ್ಟದ ವಿಜಿಲನ್ಸ್ ಸಮಿತಿ ಹಾಗೂ ವಿಶೇಫಿ ಸೆಲ್ ರಚನೆಯಾಗಿದ್ದು, ಸಮಿತಿಯ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಹೊಸ ನಿಯಮಾವಳಿಗಳನ್ವಯ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯಗಳಾದ ಬಲ್ಬ್, ಬ್ಯಾಟರಿ, ಅವಧಿ ಮೀರಿದ ಔಷಧಿ, ಪೇಂಟ್ ಡಬ್ಬಿ ಮೊದಲಾದವುಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಸಂಗ್ರಹಣೆ, ಸಾಗಣೆ ಮತ್ತು ವಿಲೇವಾರಿ ಮಾಡಬೇಕು. ಬೃಹತ್ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಘಟಕಗಳನ್ನು ಗುರುತಿಸಿ ನೋಂದಾಯಿಸಬೇಕು. ಅಂತಹ ಸ್ಥಳಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಮನೆಮಟ್ಟದಲ್ಲಿ ಕಾಂಪೋಸ್ಟಿಂಗ್ ಹಾಗೂ ಬಯೋಗ್ಯಾಸ್ ಉತ್ಪಾದನೆಗೆ ಪ್ರೋತ್ಸಾಹ ನೀಡಿ. ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸಿ ಜಿಲ್ಲೆಯಾದ್ಯಂತ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ ಇತರರಿದ್ದರು.