ಹಿರೇಮ್ಯಾಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಸೇವಾ ಕಾರ್ಯಕ್ರಮದಲ್ಲಿ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿದರು.  
ಕೊಪ್ಪಳ

ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿ, ರಾಯರಡ್ಡಿ ಮನವಿ

ಯಲಬುರ್ಗಾ: ಕ್ಷೇತ್ರದ ಪ್ರತಿ ಗ್ರಾಮಕ್ಕೂ ಅಗತ್ಯ ಸೌಕರ್ಯ ಕಲ್ಪಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಹಿರೇಮ್ಯಾಗೇರಿ ಗ್ರಾಮದಲ್ಲೂ ಶಿಕ್ಷಣ, ರಸ್ತೆ, ಕುಡಿವ ನೀರು ಸೇರಿದಂತೆ ಜನರ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಹಿರೇಮ್ಯಾಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಸರ್ಕಾರದ ಯೋಜನೆಗಳ ಸೌಲಭ್ಯಗಳು ನೇರವಾಗಿ ತಲುಪುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಸಲಹೆ, ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ಪ್ರಮುಖ ಸಮಸ್ಯೆಗಳನ್ನು ಆದ್ಯತೆ ಮೇಲೆ ಗುರುತಿಸಿ ಹಂತ ಹಂತವಾಗಿ ಪರಿಹರಿಸಲಾಗುವುದು. ಗ್ರಾಮಸ್ಥರು ಸಹ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಸ್ತೂರಬಾ ಶಾಲೆಗೆ 5 ಕೋಟಿ ರೂ. ಅನುದಾನ

ಹಿರೇಮ್ಯಾಗೇರಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಚಿವ ರಾಯರಡ್ಡಿ ತಿಳಿಸಿದರು. ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಸ್ತೂರಬಾ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತಿದ್ದು, ಅಗತ್ಯವಿರುವ ಭೂಮಿಯನ್ನು ಗ್ರಾಮಸ್ಥರು ಒದಗಿಸಬೇಕು ಎಂದು ಕೋರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಆನಂದ ಉಳ್ಳಾಗಡ್ಡಿ, ಮಹಾಂತೇಶ ಗಾಣಿಗೇರ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡಗಡಿ, ಮಲ್ಲು ಜಕ್ಕಲಿ ಇತರರಿದ್ದರು.