ಕೊಪ್ಪಳ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಂಗಾವತಿ ತಾಲೂಕಿನ ಐತಿಹಾಸಿಕ ಆನೆಗೊಂದಿಯಲ್ಲಿ ಸೆ.29ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ತಿಳಿಸಿದ್ದಾರೆ.
ಪ್ರವಾಸೋದ್ಯಮದಲ್ಲಿ ಡಿಜಿಟಲ್ ನಾವೀನ್ಯತೆ, ಕೃತಕ ಬುದ್ಧಿಮತ್ತೆ (ಎಐ) ಬಳಕೆ, ಸುಸ್ಥಿರ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ, ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ, ಪ್ರಸಿದ್ಧ ಪ್ರವಾಸಿ ತಾಣ ಆನೆಗೊಂದಿಯಲ್ಲಿ ಈ ಬಾರಿ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೈಕ್ಲಿಂಗ್ ಜಾಥಾ: ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಐತಿಹಾಸಿಕ ಅಂಜನಾದ್ರಿ ಬೆಟ್ಟದಿಂದ ಆನೆಗೊಂದಿಯ ಗಗನ್ ಮಹಲ್‌ವರೆಗೆ ವಿಶೇಷ ಸೈಕ್ಲಿಂಗ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸೈಕ್ಲಿಂಗ್ ಪ್ರಿಯರು, ಸಾರ್ವಜನಿಕರು ಭಾಗವಹಿಸಲು ಗೂಗಲ್ ಫಾರ್ಮ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಸೋಷಿಯಲ್ ಮೀಡಿಯಾ ಕಂಟೆಂಟ್ ಸ್ಪರ್ಧೆ: ಈ ವರ್ಷದ ವಿಶೇಷ ಥೀಮ್ ಆಧರಿಸಿ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ‘ಕಂಟೆಂಟ್ ಕ್ರಿಯೇಷನ್’ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಡಿಸಿ ಕೋರಿದ್ದಾರೆ.
ಕೊಪ್ಪಳ ಜಿಲ್ಲೆಯು ಐತಿಹಾಸಿಕ ಅತ್ಯಂತ ಮಹತ್ವದ ಹಾಗೂ ಪ್ರಮುಖ ತಾಣಗಳನ್ನು ಒಳಗೊಂಡಿದೆ. ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿಯಾಗಿದ್ದ ಆನೆಗೊಂದಿಯಲ್ಲಿ ಈ ಬಾರಿ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಿಸುವ ಮೂಲಕ ಈ ಭಾಗದ ಪ್ರವಾಸೋದ್ಯಮ ಕ್ಷೇತ್ರಗಳ ಉತ್ತೇಜನ ಹಾಗೂ ಜಾಗೃತಿ ಮೂಡಿಸಲಾಗುತ್ತದೆ.ಡಾ. ಸುರೇಶ ಬಿ. ಇಟ್ನಾಳ ಜಿಲ್ಲಾಧಿಕಾರಿ, ಕೊಪ್ಪಳ