ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಅಧಿಕಾರಿಗಳ ಸಭೆ ನಡೆಸಿದರು. ಡಾ. ಶಿವಾನಂದ ಮಾಸ್ತಿಹೊಳಿ, ಡಾ. ಬಸವರಾಜ ಹುಬ್ಬಳ್ಳಿ ಮತ್ತಿತರರಿದ್ದಾರೆ. 
ಜಿಲ್ಲೆ

ಕೆಪಿಎಂಇ ನೋಂದಣಿ ಫಲಕ ಕಡ್ಡಾಯ

ಗಿರೀಶ ಸಗರ

ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್​ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕಿಯ ಸಂಸ್ಥೆಗಳ) ಕಾಯ್ದೆ &2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್​ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆ, ಕ್ಲಿನಿಕ್​ ಗಳು, ಪ್ರಯೋಗಾಲಯ, ನರ್ಸಿಂಗ್​ ಹೋಮ್​ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ ಹಾವಳಿ ತಡೆಗಟ್ಟುವ ಉದ್ದೇಶದಿಂದ ಕಡ್ಡಾಯವಾಗಿ ಎಲ್ಲರಿಗೂ ಕಾಣುವ ರೀತಿಯಲ್ಲಿ ನೋಂದಣಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.

ಅಲೋಪತಿ ಆಸ್ಪತ್ರೆಗಳು ಆಕಾಶ ನೀಲಿ ಬಣ್ಣದ, ಆಯುರ್ವೇದಿಕ್​ ಆಸ್ಪತ್ರೆಗಳು ತಿಳಿ ಹಸಿರು ಬಣ್ಣದ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಈವರೆಗೆ ನೋಂದಣಿಯಾಗದೆ ಇರುವ ಸಂಸ್ಥೆಗಳು ಒಂದು ವಾರದ ಒಳಗೆ ನೋಂದಣಿ ಹಾಗೂ ನವೀಕರಣ ಮಾಡಿಸತಕ್ಕದ್ದು, ತಪ್ಪಿದಲ್ಲಿ ಕೆಪಿಎಂಪಿ ಕಾಯ್ದೆ & 2018 ರ 19ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು.

ನಕಲಿ ವೈದ್ಯರು, ನಕಲಿ ಔಷಧಾಲಯ, ಕ್ಲಿನಿಕ್​ಗಳು ಕಂಡು ಬಂದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಆಯಾ ತಾಲೂಕು ವ್ಯಾಪ್ತಿಯ ತಹಸೀಲ್ದಾರ್​, ಪೊಲೀಸ್​ ಇಲಾಖೆ ಜೊತೆ ಸಮನ್ವಯ ಸಾಧಿಸಿ ಅಂತಹ ಸಂಸ್ಥೆಗಳ ಮೇಲೆ ದಂಡ ಹಾಗೂ ಕಾನೂನು ಕ್ರಮ ಜರಗಿಸಬೇಕು ಎಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಮತ್ತಿತರರಿದ್ದರು.