ಪಡುಬಿದ್ರಿ: ಪಾಲಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ಮಕ್ಕಳನ್ನು ಶಾಲೆಗೆ ಸೇರಿಸಿ ಚೆನ್ನಾಗಿ ಓದಿಸಿ ಉತ್ತಮ ವ್ಯಕ್ತಿಯಾಗಿ ರೂಪಿಸುವ ಜವಾಬ್ದಾರಿ ಪಾಲಕರದ್ದು ಎಂದು ಎಂದು ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಸುವಾ ಕಿವಿಮಾತು ಹೇಳಿದರು.
ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸದಲ್ಲಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರ ಮಾತನಾಡಿ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನುರಿತ ಶಿಕ್ಷಕರು ನಮ್ಮ ಶಾಲೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಬೇಕು ಎಂದರು. ಬೋರ್ಡ್ ಶಾಲೆ ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ಕೃಷ್ಣ ಬಂಗೇರ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಎಲ್‌ಕೆಜಿ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಬಲೂನ್ ನೀಡಿ, ಪುಷ್ಪಾರ್ಚನೆ ಮಾಡಿ ಮೆರವಣಿಗೆಯಲ್ಲಿ ಕರೆತರಲಾಯಿತು. ಕಾಲೇಜು ವಿಭಾಗದ ಅಜೇಯ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಅಲ್ಫಿನ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರೌಢಶಾಲೆ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಜಾನೆಟ್ ವಂದಿಸಿದರು. ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ನಿರೂಪಿಸಿದರು.