ಶ್ರೀರಂಗಪಟ್ಟಣ: ತಾಲೂಕಿನ ಕೆ.ಶೆಟ್ಟಿಹಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ಸಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು 40 ಜನರು ಗಾಯಾಳುಗಳಾಗಿದ್ದಾರೆ.
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸು ಕೆ.ಶೆಟ್ಟಿಹಳ್ಳಿಯಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದೆ. ಈ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನೌಕಕರಿದ್ದು ಒಟ್ಟು 40 ಜನರಿಗೆ ಗಾಯಗಳಾಗಿವೆ. 20ಕ್ಕೂ ಹೆಚ್ಚು ಜನರಿಗೆ ಮೂಳೆಗಳು ಮುರಿದಿವೆ.
ಗಾಯಾಳುಗಳನ್ನು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾರ್ಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯತೆ ಇರುವವರನ್ನು ಮೈಸೂರಿನ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರವಾನಿಸಲಾಗಿದೆ.
ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.