ಮಂಡ್ಯ: ಕರ್ನಾಟಕ ಸ್ವಾಭಿಮಾನಿ ಸಮಸಮಾಜ(ಕೆಎಸ್‌ಎಸ್) ಸಂಘಟನೆಯಿಂದ ನಗರದಲ್ಲಿ ಜ.20ರಂದು ಸಾವಿತ್ರಿ ಬಾಯಿ ಪುಲೆ ಜಯಂತಿ ಹಾಗೂ ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ನಗರದ ಜೆ.ಸಿ ವೃತ್ತದಿಂದ ವೇದಿಕೆ ಕಾರ್ಯಕ್ರಮ ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಲಾಗುವುದು. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ 1500ಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೆಳಗ್ಗೆ 10ಕ್ಕೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ಬೌದ್ದ ವಿಶ್ವವಿದ್ಯಾಲಯದ ಬಂತೇ ಬೋಧಿದತ್ತ ತೇರಾ ಸಾನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುಷ್ಪಾಭಿಷೇಕ ನೆರವೇರಿಸುವರು. ಪ್ರಜಾ ಪರಿವರ್ತನ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಗೋಪಾಲ್ ಪ್ರಧಾನ ಭಾಷಣ ಮಾಡುವರು. ಕೆಎಸ್‌ಎಸ್‌ನ ಸಂಸ್ಥಾಪಕ ಡಾ.ಕುಮಾರಸ್ವಾಮಿ ಸಾಕ್ಯ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಜಿ.ಎಸ್.ಸ್ವಾಮಿ ಗುಡಿಗೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಡಾ.ಲೋಕೇಶ್ ಮೌರ್ಯ, ಸಂಘಟನಾ ಕಾರ್ಯದರ್ಶಿ ಕೆ.ಸಿ.ಲೋಕೇಶ್, ಜಂಟಿ ಕಾರ್ಯದರ್ಶಿ ಎಂ.ಜೆ.ಚಲುವರಾಜು, ಜಿಲ್ಲಾಧ್ಯಕ್ಷ ಎ.ಪಿ.ಚೌಧರಿ, ಪ್ರಧಾನ ಕಾರ್ಯದರ್ಶಿ ಎಚ್.ಡಿ.ಪ್ರದೀಪ್ ಹಾಜರಿದ್ದರು.