ಕೂಡ್ಲಿಗಿ: ಋತುಚಕ್ರ ಮಹಿಳೆಯರಿಗೆ ಪ್ರತಿ ತಿಂಗಳು ಬರುವ ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಅದನ್ನು ಮಹಿಳೆಯರು ಆತ್ಮಸ್ಥೈರ್ಯದಿಂದ ಎದುರಿಸಬೇಕೇ ಹೊರತು ಆತಂಕದಿಂದಲ್ಲ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಸುನೀತಾ ಹೇಳಿದರು.
ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಬುಧವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಮಾನ್ಯವಾಗಿ 14 ರಿಂದ 45 ವರ್ಷದ ಮಹಿಳೆಯರು ಪ್ರತಿ ತಿಂಗಳು ಮುಟ್ಟಾಗುತ್ತಾರೆ. ಇದು ಸಹಜ ಪ್ರಕ್ರಿಯೆಯಾದರೂ ಆ ದಿನಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಗುತ್ತದೆ.
ಋತುಚಕ್ರ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ಶುಚಿತ್ವದ ಅಭ್ಯಾಸಗಳು ಮಹಿಳೆಯರ ಆರೋಗ್ಯ ಮತ್ತು ಆತ್ಮವಿಶ್ವಾಸದ ಮಟ್ಟ ಹೆಚ್ಚಿಸುತ್ತದೆ ಎಂದರು.
ಮುಟ್ಟಿನ ದಿನಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದಿದ್ದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಇದರಿಂದಾಗಿ ಹೆಣ್ಣು ಮಕ್ಕಳು ಆ ದಿನಗಳಲ್ಲಿ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಒಣಗಿದ ಬಟ್ಟೆಗಳನ್ನು ಉಪಯೋಗಿಸುವ ಜತೆ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಕೆ.ಸುನೀತಾ ತಿಳಿಸಿದರು. ತಾಲೂಕು ಆಪ್ತ ಸಮಾಲೋಚಕರಾದ ಪ್ರಶಾಂತ, ಓಬಣ್ಣ, ಉಪನ್ಯಾಸಕ ಮಂಜುನಾಥ ಇತರರಿದ್ದರು.