ಜಿಲ್ಲೆ

ಕುವೆಂಪುರವರ ಬರಹಗಳು ಸಾರ್ವಕಾಲಿಕ: ಡಾ.ಮಂತರ್ ಗೌಡ

ಆದರ್ಶ್. ಎಂ.ಕೆ.

ಮಡಿಕೇರಿ: ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರು ಕನ್ನಡ ನಾಡು-ನುಡಿಗೆ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರೂ ತಿಳಿದುಕೊಂಡು, ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ಶುಕ್ರವಾರ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೋಮವಾರಪೇಟೆ ಪಟ್ಟಣದ ಜಿಎಂಪಿ ಶಾಲೆಯ ಚೆನ್ನಬಸಪ್ಪ ಸಭಾಂಗಣ ಬಳಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ/ ಪುತ್ಥಳಿಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಪುತ್ಥಳಿ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದ ಅವರು, ಪುತ್ಥಳಿ ನಿರ್ಮಾಣ ಸಂಬಂಧ ಜಾಗವು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಜಿಲ್ಲಾಡಳಿತವು ಪುತ್ಥಳಿ ನಿರ್ಮಾಣಕ್ಕೆ ಅವಕಾಶ ಮಾಡಬೇಕು ಎಂದು ಕೋರಿದರು.


ಪ್ರತಿಯೊಬ್ಬರೂ ಹುಟ್ಟುವಾಗ ಇಂತಹ ಸಮಾಜದಲ್ಲಿ ಹುಟ್ಟುತ್ತೇವೆ ಎಂದು ಅರ್ಜಿ ಸಲ್ಲಿಸಿರುವುದಿಲ್ಲ. ಕುವೆಂಪುರವರು ಹೇಳಿದಂತೆ ಹುಟ್ಟುತ್ತ ವಿಶ್ವಮಾನವರಾಗಿ, ಬೆಳೆಯುತ್ತಾ ಅಲ್ಪ ಮಾನವರಾಗುತ್ತೇವೆ. ಆಧುನಿಕ ಯುಗದಲ್ಲಿಯೂ ಸಹ ಜಾತಿ ವ್ಯವಸ್ಥೆ ಕಡಿಮೆಯಾಗುತ್ತಿಲ್ಲ ಎಂದು ಅವರು, ರಾಷ್ಟ್ರಕವಿ ಕುವೆಂಪುರವರು ಸಾರಿರುವ ವಿಶ್ವ ಮಾನವ ಸಂದೇಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಇಲ್ಲದವರ ಏಳಿಗೆಗಾಗಿ ಶ್ರಮಿಸಬೇಕಿದೆ ಎಂದರು.


ಕುವೆಂಪು ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಪ್ರತಿಯೊಬ್ಬರೂ ವಿಶಾಲ ಮನೋಭಾವ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಗೆ ಪಣತೊಡಬೇಕು ಎಂದರು.


ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಕುವೆಂಪುರವರ ಬರಹಗಳು, ಭಾಷಣಗಳು, ಕಾದಂಬರಿ, ಕವಿತೆ, ಹೀಗೆ ಪ್ರತಿಯೊಂದನ್ನು ಅಧ್ಯಯನ ಮಾಡಿದಾಗ ಕನ್ನಡ ಭಾಷೆಯ ಬಗ್ಗೆ ಅವರಿಗಿದ್ದ ಪ್ರೀತಿ, ನಾಡಿನ ಚಿತ್ರಣ ದೊರೆಯಲಿದೆ. ಕುವೆಂಪು ಅವರ ಪಂಚಸೂತ್ರಗಳಾದ ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ ಹಾಗೂ ಪೂರ್ಣದೃಷ್ಟಿ ಒಳಗೊಂಡಿರಬೇಕು ಎಂದು ಹೇಳಿದರು.


ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ.ಕೋರನ ಸರಸ್ವತಿ ಮಾತನಾಡಿ, ಕುವೆಂಪು ಅವರು ರಚಿಸಿದ ಕೃತಿಗಳು ಕನ್ನಡ ಸಾಹಿತ್ಯಕ ಮೌಲ್ಯವನ್ನು ಸಾರಿ ಹೇಳುತ್ತವೆ. ಜಗದಕವಿ, ಯುಗದಕವಿ ಕುವೆಂಪುರವರು ಸಾಹಿತ್ಯ, ಕವನಸಂಕಲನ, ಕಾದಂಬರಿ, ನಾಟಕ, ವಿಮರ್ಶೆಗಳು ಬರೆಯುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವರ್ಣಿಸಿದರು.


ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಅನಂತಶಯನ ಮಾತನಾಡಿ, ಕುವೆಂಪು ಅವರ ಬರಹ ಹಾಗೂ ವಿಮರ್ಶೆಗಳು ಜನಮೆಚ್ಚುಗೆಗೆ ಪಾತ್ರವಾಗಿದೆ. ಕುವೆಂಪುಡಿವರು ಸಂಪ್ರದಾಯವನ್ನು ವಿರೋಧಿಸಿದರು ಸಹ, ದೈವತ್ವವನ್ನು ಹೊಂದಿದ್ದರು ಎಂದು ಹೇಳಿದರು.


ಜಿ.ಪಂ.ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಭಾಷೆಗೆ ನೀಡಿರುವ ಕೊಡುಗೆ ಅಪಾರ. ಕುವೆಂಪು ಅವರು ನಾಡಿನ ಆಸ್ತಿಯಾಗಿದ್ದು, ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಓದಬೇಕು. ನಗರದಲ್ಲಿನ ಕುವೆಂಪು ಅವರ ಪುತ್ಥಳಿ ನವೀಕರಣಕ್ಕೆ ಜಿಲ್ಲಾಡಳಿತ ಸ್ಪಂದಿಸಿದ್ದು, ಜಿಲ್ಲಾಡಳಿತಕ್ಕೆ ಕೃತಜ್ಞತೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಕುವೆಂಪು ಅವರ ಹಾದಿಯಲ್ಲಿ ಪ್ರತಿಯೊಬ್ಬರೂ ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.


ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನಿರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎನ್.ಚಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇತರರು ಇದ್ದರು.


ಕಾರ್ಯಕ್ರಮಕ್ಕೂ ಶಾಸಕ ಎ.ಎಸ್.ಪೊನ್ನಣ್ಣ, ಮಂತರ್ ಗೌಡ, ಕೆ.ಪಿ.ಚಂದ್ರಕಲಾರವರು ನಗರದಲ್ಲಿರುವ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ನೆರವೇರಿಸಿದರು.