ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅಧ್ಯಕ್ಷೆಯಲ್ಲಿ ಶುಕ್ರವಾರ ಕೊಪ್ಪಳದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಕಾರ್ಮಿಕ ಅಧಿಕಾರಿ ರೇಣುಕಾ ಇದ್ದರು. 
ಜಿಲ್ಲೆ

ಪ್ರಕರಣಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಿ:ಮೊಹಸೀನ್

ಕೊಪ್ಪಳ:ಕೈಗಾರಿಕಾ ವಿವಾದ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ವಿಳಂಬವಿಲ್ಲದಂತೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈವರೆಗೆ 10 ಪ್ರಕರಗಳು ದಾಖಲಾಗಿದ್ದು , 5 ವಿಲೇವಾರಿಯಾಗಿವೆ. ತಿಂಗಳೊಳಗೆ ಬಾಕಿ ಪ್ರಕರಣ ವಿಲೇಗೊಳಿಸಿ. ಉಪದಾನ ಪಾವತಿ ಕಾಯ್ದೆಯಡಿ ಸ್ವೀಕೃತವಾದ 43 ಪ್ರಕರಣಗಳಲ್ಲಿ 13 ಪ್ರಕರಣಗಳಲ್ಲಿ ಬಾಕಿ 30 ವಿಚಾರಣೆ ಮುಗಿಸಿ ಮುಕ್ತಾಯ ಮಾಡಿ.

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ. ಇ- ಶ್ರಮ್ ನೋಂದಣಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಿ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಐಪಿಜಿಆರ್‌ಎಸ್ ನಲ್ಲಿ ದಾಖಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ಇಲಾಖೆ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಜಾಗೃತಿ ಮೂಡಿಸಿ. ನೋಂದಣಿ, ನವೀಕರಣ ವಿವರ ಮತ್ತು ನೀಡಲಾದ ಸೌಲಭ್ಯಗಳ ಬಗ್ಗೆ ಆಗಾಗ್ಗೆ ಪರಿಶೀಲಿಸಿ. ಅರ್ಹರಿಗೆ ಸೌಲಭ್ಯ ಒದಗಿಸಿ.

ಬಾಲ ಕಾರ್ಮಿಕರನ್ನು ಶಾಲೆಗೆ ಸೇರಿಸಿ. ನಗರ, ಸ್ಥಳೀಯ ಸಂಸ್ಥೆಗಳಿಗೆ ಸುಂಕ ವಸೂಲಾತಿ ಮಾಹಿತಿ ನೀಡಿ. ಕಾರ್ಖಾನೆಗಳಿಗೆ ಭೇಟಿ ನೀಡಿ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೌಲಭ್ಯ ಕಲ್ಪಿಸುವಂತೆ ಸೂಚಿಸುವಂತೆ ತಾಕೀತು ಮಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರೇಣುಕಾ ಮಾತನಾಡಿ, ಸ್ವೀಕೃತವಾಗುವ ಪ್ರಕರಣಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುತ್ತಿದೆ. ಹೋಟೆಲ್, ಕಾರ್ಖಾನೆ, ಮಿಲ್‌ಗಳಿಗೆ ದಿಢೀರ್ ಭೇಟಿ ನೀಡಿ ಬಾಲಕಾರ್ಮಿಕರಿದ್ದಲ್ಲಿ ಸೂಕ್ತ ಪುನರ್ವಸತಿ ಹಾಗೂ ಶೈಕ್ಷಣಿಕ ಸೌಲಭ್ಯ ಒದಗಿಸಲಾಗುತ್ತಿದೆ.

ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಇತರ ಅಧಿಕಾರಿಗಳಿದ್ದರು.