ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ವಿಶೇಷ ಅಧಿಕಾರಿಯನ್ನು ಸರ್ಕಾರ ನೇಮಕ ಮಾಡಿದ್ದು ಮುಳುಗಡೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ಎಲ್ಲ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ದಾಖಲೆ ಸಹಿತ ಸರ್ಕಾರಕ್ಕೆ ಆರು ತಿಂಗಳಿನಲ್ಲಿ ವರದಿ ಸಲ್ಲಿಸಲಾಗುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಶರಾವತಿ ಮುಳುಗಡೆ ಸಂತ್ರಸ್ತರ ಪ್ರಕರಣ ಪರಿಶೀಲನೆ ಕುರಿತು ಸರ್ಕಾರದಿಂದ ನೇಮಕವಾಗಿರುವ ವಿಶೇಷ ಕರ್ತವ್ಯಾಧಿಕಾರಿ ಬಿ.ಶಿವಕುಮಾರ್ ಜತೆ ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಚೆಗೆ ಮುಖ್ಯಮಂತ್ರಿಗಳು ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಸಮಕ್ಷಮದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಎರಡು ತಿಂಗಳೊಳಗಾಗಿ ಪರಿಶೀಲಿಸಿ ವರದಿ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ 14 ಸಾವಿರಕ್ಕೂ ಅಧಿಕ ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳಿದ್ದು ಪರಿಶೀಲನೆ ಹಾಗೂ ದಾಖಲೆ ಸಂಗ್ರಹಣೆಗೆ ಕನಿಷ್ಠ ಆರು ತಿಂಗಳು ಬೇಕಾಗುತ್ತದೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕು ಸಿಗಬೇಕು ಎನ್ನುವ ಹಿನ್ನೆಲೆಯಲ್ಲಿ ರಾಘವೇಂದ್ರ ಅವರು ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂದರು.