ಜಿಲ್ಲೆ

ಸ್ವಾತಂತ್ರ್ಯೋತ್ಸವದಲ್ಲಿ ನಿಯಮ ಪಾಲನೆ ಕಡ್ಡಾಯ, ಜಿಲ್ಲಾಧಿಕಾರಿ ರವೀಂದ್ರ ಸೂಚನೆ ಕರೊನಾ ಸೇನಾನಿಗಳಿಗೆ ಸನ್ಮಾನಕ್ಕೆ ಸಿದ್ಧತೆ

Bengaluru Rural

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆ.15ರಂದು ನಡೆಯಲಿರುವ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವದಲ್ಲಿ ಪರಸ್ಪರ ಅಂತರ, ಸ್ಯಾನಿಟೈಸೇಷನ್, ಮಾಸ್ಕ್ ಬಳಕೆ ನಿಯಮದೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಆರೋಗ್ಯ ಇಲಾಖೆ ಸಹಾಯಕ ಸಿಬ್ಬಂದಿ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ ಸೇರಿ ಕರೊನಾ ವಾರಿಯರ್ಸ್‌ಗಳನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೆಲವು ಮಾರ್ಗಸೂಚಿ ನೀಡಿದ್ದು, ಅದರನ್ವಯ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ, ಭಾಷಣ, ಪರೇಡ್ ಮತ್ತಿತರ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಪರಸ್ಪರ ಅಂತರ ಕಾಯ್ದುಕೊಳ್ಳಬೇಕಾಗಿರುವುದರಿಂದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ಮಕ್ಕಳು ಭಾಗವಹಿಸುವುದಿಲ್ಲ. ಆಯ್ದ ಪ್ರತಿಭಾವಂತ ವಿದ್ಯಾರ್ಥಿಗನ್ನು ಮಾತ್ರ ಗೌರವಿಸಲಾಗುವುದು ಎಂದು ತಿಳಿಸಿದರು.

ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಿ, 8.30ಕ್ಕೆ ದೇವನಹಳ್ಳಿ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಬೇಕು. 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಪೊಲೀಸ್, ಗೃಹ ರಕ್ಷಕದಳ, ಅರಣ್ಯ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಪಥಸಂಚಲನ ನಡೆಸುವರು. ವಿದ್ಯಾರ್ಥಿಗಳ ತಂಡದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಟ್ ಧರಿಸುವುದು ಕಡ್ಡಾಯ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿದರು.

ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆಯಾಗದಂತೆ ಹಾಗೂ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು. ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡುವಂತೆ, ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ, ಸುರಕ್ಷತಾ ಕ್ರಮ ಅನುಸರಿಸುವಂತೆ ಪುರಸಭೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಉಪಸ್ಥಿತರಿದ್ದರು.