ಬೆಂಗಳೂರು: ಕರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳು ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಸಾರಿಗೆ ಬಂದ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೆಲವೆಡೆ ಖಾಸಗಿ ಬಸ್ ಮತ್ತು ಆಟೋರಿಕ್ಷಾಗಳ ಮಾಲೀಕರು ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಸುಲಿಗೆ ಮಾಡಿ ಶೋಷಿಸುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ ಎಂದರು.
ಕೆಲವು ಜಿಲ್ಲೆಗಳನ್ನು ಈಗಾಗಲೇ ಲಾಕ್ಔಟ್ ಜಿಲ್ಲೆಗಳೆಂದು ಘೋಷಿಸಲಾಗಿದ್ದು, ಇಂತಹ ಕಡೆಗಳಿಗೆ ಅಂತರ್ ಜಿಲ್ಲಾ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತರಕ್ಷಣೆಯನ್ನು ಗಮನಿಸಿ ಕೈಗೊಳ್ಳಲಾದ ಸರ್ಕಾರದ ಈ ನಿರ್ಧಾರವನ್ನು ಯಾರೂ ಉಲ್ಲಂಘಿಸಬಾರದು. ಈಗಾಗಲೇ ಇಂತಹ ಪ್ರಕರಣಗಳನ್ನು ತಡೆಗಟ್ಟಬೇಕೆಂದು ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇಂತಹ ಪ್ರಕರಣಗಳು ಮರುಕಳಿಸಿದರೆ ಅಂತಹವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲು ಹಿಂದೆಮುಂದೆ ನೋಡುವುದಿಲ್ಲ. ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಹವಣಿಸಿದರೆ ಅಂತಹವರಿಗೆ ತಕ್ಕಶಾಸ್ತಿ ಮಾಡಲಾಗುವುದು ಎಚ್ಚರಿಕೆ ನೀಡಿದರು.
ಕರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಈ ಎಲ್ಲ ಕ್ರಮಗಳಿಗೆ ಖಾಸಗಿ ವಾಹನ ಸಂಸ್ಥೆಗಳು ಮತ್ತು ಸಾರ್ವಜನಿಕರು ತಮ್ಮ ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ಮತ್ತೊಮ್ಮೆ ತಮ್ಮಲ್ಲಿ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ ಎಂದರು.