ಜಿಲ್ಲೆ

ಭಯ ಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ

ಚಿಕ್ಕಮಗಳೂರು: ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಒಳಗಾಗಿ ವಿವಿಧ ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್.ಗೌಡರ್ ತಿಳಿಸಿದರು.
ನಗರದ ಸಹ್ಯಾದ್ರಿ ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದು ಹೋದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳಿಗೆ ನೇಮಕವಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು 18 ರಿಂದ 20 ವರ್ಷದ ಒಳಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೆ ಐಎಎಸ್, ಐಪಿಎಸ್, ಐಎಫ್‌ಎಸ್ ಮುಂತಾದ ಉನ್ನತ ಹುದ್ದೆಗಳಿಗೆ ಹೋಗಬಹುದಾಗಿದೆ. ಉತ್ತರ ಪ್ರದೇಶದ ಬಡ ರೈತ ಕುಟುಂಬದ ವಿದ್ಯಾರ್ಥಿಯೊಬ್ಬ ತನ್ನ ತಂದೆ-ತಾಯಿಯೊಂದಿಗೆ ಜಮೀನು ಕೆಲಸ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಐಎಎಸ್ ಪಾಸಾಗಿ ಸಾಧನೆ ಮಾಡಿದ್ದಾನೆ ಎಂದು ಉದಾಹರಣೆ ನೀಡಿದರು.
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಇ.ಜಿ.ಉಲ್ಲಾಸ್ ಮಾತನಾಡಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆದರೆ ಗ್ರಾಪಂ, ತಾಪಂ, ಜಿಪಂ ವ್ಯಾಪ್ತಿಯ ಇಲಾಖೆಗಳಲ್ಲಿ ಬಹುಸುಲಭವಾಗಿ ಉದ್ಯೋಗ ಪಡೆದುಕೊಳ್ಳಬಹುದು ಎಂದರು.
ದಿನೇ ದಿನೇ ಹೊಸ ಹೊಸ ಆವಿಷ್ಕಾರಗಳು ಬೆಳೆಯುತ್ತಿರುವುದರಿಂದ ಜೀವನದಲ್ಲಿ ಒಂದು ರೀತಿಯ ಸ್ಪರ್ಧೆ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ ಬಯಸುವುದಾದರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವುದು ಅಗತ್ಯ ಎಂದು ತಿಳಿಸಿದರು.
ವಿದ್ಯಾರ್ಥಿಗಳಾದ ಪ್ರಾರ್ಥನಾ, ಬಿ.ಎಸ್.ಬಿಂದು, ಎಚ್.ಜೆ.ಅನನ್ಯ ಮತ್ತಿತರರಿದ್ದರು.