ಮದ್ದೂರು: ಪಟ್ಟಣದಲ್ಲಿ ಗಣಪತಿ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮಾಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ‘ವಿಜಯವಾಣಿ’ಗೆ ತಿಳಿಸಿದರು.
ಭಾನುವಾರ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿದ್ದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಘಟನೆಗೆ ಕಾರಣರಾದವರು ಮತ್ತು ಇದರ ಹಿಂದೆ ಯಾವ ವ್ಯಕ್ತಿ ಇದ್ದರು ಸಹ ಅವರ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಭಾನುವಾರ ರಾತ್ರಿ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲು ಎಸೆದ ಘಟನೆಯನ್ನು ನಾನು ಖಂಡಿಸುತ್ತೇನೆ. ಘಟನೆ ಸಂಭವಿಸುತಿದ್ದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ಸೂಚಿಸಿದ್ದೆ. ತಕ್ಷಣವೇ ಪೊಲೀಸರು ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು 21 ಜನರನ್ನು ಈಗಾಗಲೇ ಬಂಧಿಸಿದ್ದಾರೆ ಎಂದರು.
ಆದರೆ ಕೆಲ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಘಟನೆಗೆ ರಾಜಕೀಯ ಬಣ್ಣ ಹಚ್ಚಿ ಜನರಲ್ಲಿ ಪ್ರಚೋದನೆ ಮೂಡಿಸುವ ಪ್ರಯತ್ನ ಮಾಡುತ್ತಿದ್ದು, ಶಾಂತಿಯ ಸಂದೇಶ ನೀಡಬೇಕಾದ ಜಾಗದಲ್ಲಿ ಕೋಮುಗಲಭೆ ಪ್ರಚೋದನೆ ಮಾಡುವುದನ್ನು ನಾವು ಖಂಡಿಸುತ್ತೇನೆ. ಮದ್ದೂರಿನಲ್ಲಿ ಇದೂವರೆಗೆ ಈ ರೀತಿಯ ಘಟನೆ ನಡೆದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯ ಕಾರಣಗಳಿಂದ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿದ್ದಾರೆ. ಆದರೆ ನಮ್ಮ ತಾಲೂಕಿನ ಜನ ಬುದ್ಧಿವಂತರು. ಕೋಮುವಾದಕ್ಕೆ ಅವಕಾಶ ನೀಡುವುದಿಲ್ಲ ಎಂದು ನಂಬಿದ್ದೇನೆ. ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಮದ್ದೂರನ್ನು ಬಳ ಕೊಳ್ಳಬೇಡಿ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಕಿಡಿಕಾರಿದರು.