ಜಿಲ್ಲೆ

ಬಿಜೆಪಿ, ಜೆಡಿಎಸ್ ಒಗ್ಗಟ್ಟಿನಿಂದ ಮುಂದುವರಿಯಲಿ

ಪ್ರಸಿನ್ ಕೆ.ಆರ್

ಮದ್ದೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವೆಂದು ಮನ್‌ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕಿನ ಗೊರವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವರನ್ನು ಅಭಿನಂದಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆಡಳಿತ ಪಕ್ಷವಿದ್ದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಿರುವುದು ಆಡಳಿತ ಸರ್ಕಾರದ ವಿರೋಧಿಗೆ ಉದಾಹರಣೆಯಾಗಿದೆ ಎಂದರು. ಪ್ರತಿಯೊಬ್ಬ ಕಾರ್ಯಕರ್ತರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದ್ದು, ಮುಂದಿನ ಗ್ರಾ.ಪಂ., ತಾ.ಪಂ ಹಾಗೂ ಜಿ.ಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಗೆಲುವು ಸಾಧಿಸಬಹುದೆಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತ ಮತ್ತು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಇದರಿಂದ ಬೇಸತ್ತಿರುವ ಜನರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ ಎಂದರು.

ಪ್ರತಿ ಗ್ರಾಮಗಳಲ್ಲಿಯೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ಮುಖಂಡರು ಕಾರ್ಯಯೋಜನೆ ರೂಪಿಸುವಂತೆ ಕರೆ ನೀಡಿದರು.

ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಆಡಳಿತ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕೆಂದು ತಿಳಿಸಿದ ಅವರು ಗೊರವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ 7 ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದರು.

ನೂತನ ನಿರ್ದೇಶಕರಾಗಿ ಆಯ್ಕೆಯಾದ ಜಿ.ಕೆ.ಪುಟ್ಟಸ್ವಾಮಿ, ಜಿ.ಎಸ್.ಅವಿನಾಶ್, ಜಿ.ಸಿ.ಶಂಕರೆಗೌಡ, ಜಿ.ಕೆ.ಶಿವರಾಮ, ನವೀನ್ ಹಾಗೂ ಪುಂಗಾ ಅವರನ್ನು ಗೌರವಿಸಲಾಯಿತು.

ಮುಖಂಡರಾದ ಬೋರೇಗೌಡ, ಲಿಂಗಪ್ಪ, ಗೊರವನಹಳ್ಳಿ ಪ್ರಸನ್ನ, ಉಮೇಶ್, ಶಿವು, ಶಂಕರಯ್ಯ, ಕುಮಾರ್ ಇದ್ದರು.