ಸಿದ್ದಾಪುರ: ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಿಡುವುದಕ್ಕಿಂತ ಉತ್ತಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡಿದರೆ ಅದು ಬಹುದೊಡ್ಡ ಸಂಪನ್ಮೂಲವಾಗುತ್ತದೆ. ಪಾಲಕರು ನಿತ್ಯದ ಕೆಲಸಗಳ ನಡುವೆ ಮಕ್ಕಳ ಶಿಕ್ಷಣದ ಕುರಿತು ಗಮನ ಹರಿಸಬೇಕು ಎಂದು ಶಾಸಕ ಭೀಮಣ್ಣ ಟಿ.ನಾಯ್ಕ ಹೇಳಿದರು.
ತಾಲೂಕಿನ ಕೊಳಗಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಯಾವ ಮಗುವೂ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ, ಎಲ್ಲ ಸೌಲಭ್ಯಗಳಿದ್ದರೂ ಹೆಚ್ಚಿನ ಡೊನೇಷನ್ ಕೊಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವಂತಾಗಬೇಕು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ, ನಮ್ಮ ಜಿಲ್ಲೆಯ ಎಲ್ಲ ಶಾಲೆಗಳಲ್ಲೂ ಮಕ್ಕಳಿಗೆ ಯಕ್ಷಗಾನ ಕಲಿಕೆಯ ಜತೆಗೆ ಸ್ಪರ್ಧೆಗಳನ್ನು ಆಯೋಜಿಸುವಂತಾಗಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುದರ್ಶನ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಶ್ರೀಕಾಂತ ಎಲ್.ಭಟ್ಟ, ಕೆ.ಜಿ.ನಾಗರಾಜ, ಸಿ.ಆರ್.ನಾಯ್ಕ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಇತರರಿದ್ದರು.
ಸಿ.ಆರ್.ಪಿ.ಚಂದ್ರೇಗೌಡ, ಮುಖ್ಯ ಶಿಕ್ಷಕ ಧರ್ಮಣ್ಣ, ಶಿಕ್ಷಕಿ ಶರಾವತಿ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.