ಹನೂರು: ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದರ ಮೂಲಕ ಸಾಮಾಜಿಕ ಭದ್ರತಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಧನಂಜಯ ತಿಳಿಸಿದರು.
ತಾಲೂಕಿನ ಉದ್ದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಿಂಚಣಿ ಅದಾಲತ್ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಇದರಿಂದ ಅರ್ಜಿಗಳ ವಿಲೇವಾರಿಯೂ ಪಾರದರ್ಶಕವಾಗಿದ್ದು, ಸ್ಥಳದಲ್ಲಿಯೇ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಕಾರ್ಯಕ್ರಮವನ್ನು ಗ್ರಾಮದಲ್ಲೇ ಆಯೋಜಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಾದ ವಿಕಲಚೇತನ, ವೃದ್ಧಾಪ್ಯ, ವಿಧವಾ ವೇತನ, ಮನಸ್ವಿನಿ, ಮೈತ್ರಿ ಮೂಲಕ ಫಲಾನುಭವಿಗಳು ಸರ್ಕಾರದಿಂದ ಮಾಸಿಕ ಪಿಂಚಣಿ ಪಡೆಯಬಹುದು. ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಮಧ್ಯವರ್ತಿಗಳ ಮೊರೆ ಹೋಗಬೇಡಿ: ಕಂದಾಯ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ನೇರವಾಗಿ ಕಚೇರಿ ಅಥವಾ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗಬಾರದು. ಒಂದು ವೇಳೆ ಮಧ್ಯವರ್ತಿಗಳ ಮೊರೆ ಹೋದಲ್ಲಿ ಸಮಯ ವ್ಯರ್ಥವಾಗಲಿದೆ. ಅಲ್ಲದೆ ಹಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಗ್ರಾಮಸ್ಥರಿಂದ 17 ಅರ್ಜಿಗಳು ಸಲ್ಲಿಕೆಯಾದವು. ಇದೇ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪ್ರತಿ ವಿತರಿಸಲಾಯಿತು. ಗ್ರಾಪಂ ಸದಸ್ಯರಾದ ಪ್ರಭುಸ್ವಾಮಿ, ನಂಜುಂಡಸ್ವಾಮಿ, ಶಿರಸ್ತೇದಾರ್ ನಾಗೇಂದ್ರ, ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿಗಳಾದ ಶೇಷಣ್ಣ, ವಾಸುದೇವ್, ಹೇಮಾ ಇತರರು ಇದ್ದರು.