ಜಿಲ್ಲೆ

ಜಿಲ್ಲೆ ಕ್ಷಯ ಮುಕ್ತವಾಗಲಿ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ಸುಮಾರು 35 ಗ್ರಾಮ ಪಂಚಾಯಿತಿಗಳನ್ನು ಕ್ಷಯ ಮುಕ್ತ ಗ್ರಾಪಂಗಳನ್ನಾಗಿ ಮಾಡಿದ್ದು ಅಭಿನಂದನೀಯ. ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಆರೋಗ್ಯ ಇಲಾಖೆ ಸಿಬ್ಬಂದಿ, ನಗರ ಮತ್ತು ಗ್ರಾಮೀಣ ಸ್ಥಳಿಯ ಸಂಸ್ಥೆಗಳು ಸಕ್ರಿಯವಾಗಿ ತೊಡಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನೆ ನಿಮಿತ್ತ ಏರ್ಪಡಿಸಿದ್ದ ವಿಶ್ವ ಕ್ಷಯ ರೋಗ ದಿನ ಹಾಗೂ ಕ್ಷಯ ಮುಕ್ತ ಗ್ರಾಪಂಗಳ ಸತ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವ ಆರೋಗ್ಯ ಸಂಸ್ಥೆಯು 2030ರ ವೆಳೆಗೆ ವಿಶ್ವವನ್ನು ಕ್ಷಯ ರೋಗ ಮುಕ್ತಗೊಳಿಸುವ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವರ್ಷದಲ್ಲಿ 35 ಗ್ರಾಮ ಪಂಚಾಯಿತಿಗಳನ್ನು ಕ್ಷಯ ಮುಕ್ತಗೊಳಿಸಿದ್ದು ಸಂತಸ ತಂದಿದೆ. ಜಿಲ್ಲೆಯಲ್ಲಿ ಈಗ 3,323 ಕ್ಷಯ ರೋಗದ ಪಾಸಿಟಿವ್​ ಪ್ರಕರಣಗಳಿವೆ. ಇದರಲ್ಲಿ ಅತೀ ಹೆಚ್ಚು ಪ್ರಕರಣಗಳು ಹುಬ್ಬಳ್ಳಿ ಶಹರದಲ್ಲಿವೆ. ಇದಕ್ಕೆ ಹೆಚ್ಚು ಜನಸಾಂದ್ರತೆ ಕಾರಣವಿರಬಹುದು ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಕ್ಷಯ ರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಇದಕ್ಕೆ ಮುನ್ನೆಚ್ಚರಿಕೆ ಅಗತ್ಯ. ಜಿಲ್ಲೆಯ 146 ಗ್ರಾಮ ಪಂಚಾಯಿತಿಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡಲು ಕ್ರಮ ವಹಿಸಲಾಗಿದೆ. ಪ್ರತಿ ಗ್ರಾಪಂ ವ್ಯಾಪ್ತಿಯ ಮನೆಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಕ್ಷಯ ರೋಗದ ತಿಳಿವಳಿಕೆ ನೀಡಲಿದ್ದಾರೆ ಎಂದರು.

ಇದಕ್ಕೂ ಪೂರ್ವದಲ್ಲಿ ಜನಜಾಗೃತಿ ಜಾಥಾ ನಡೆಸಲಾಯಿತು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರ್​ಸಿಎಚ್​ ಡಾ. ಸುಜಾತಾ ಹಸವಿಮಠ, ತಾಲೂಕು ವೈದ್ಯಾಧಿಕಾರಿ ಡಾ.ಕೆ.ಎನ್​.ತನುಜಾ, ಇಲಾಖೆ ಅಧಿಕಾರಿಗಳು, ಇತರರು ಇದ್ದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಸ್ವಾಗತಿಸಿದರು. ಬಿ.ಆರ್​.ಪಾತ್ರೋಟ ನಿರೂಪಿಸಿದರು. ಡಾ.ರವೀಂದ್ರ ಬೋವೆರ ವಂದಿಸಿದರು.