ಜಿಲ್ಲೆ

ಕಾಂತರಾಜ ವರದಿ ಅಂಗೀಕಾರಕ್ಕೆ ಸರ್ಕಾರ ಮುಂದಾಗಲಿ

ರಾಯಚೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡಲು ನೇಮಕ ಮಾಡಲಾಗಿದ್ದ ಕಾಂತರಾಜ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯದ ಕೊರತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಆಯೋಗದ ವರದಿಯನ್ನು ಅಂಗೀಕರಿಸಿ ಹಿಂದುಳಿದ ವರ್ಗಗಳಿಗೆ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಎಂದರು.
ಸರ್ಕಾರಿ ಭೂಮಿ ಸಾಗುವಳಿ ಮಾಡಿಕೊಂಡು ಬಂದಿರುವ ಕುಟುಂಬಗಳು ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಸುವ ಅರ್ಜಿ ವಿಲೇವಾರಿಗೆ ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿನ 11 ಸಾವಿರ ಹಳ್ಳಿಗಳಲ್ಲಿ ಅಂತ್ಯ ಸಂಸ್ಕಾರಕ್ಕೆ ಭೂಮಿ ಇಲ್ಲದಂತಾಗಿದ್ದು, ಕೂಡಲೇ ಭೂಮಿ ನೀಡಬೇಕು. ಒಳ ಮೀಸಲಾತಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶನಕ್ಕೆ ಮುಂದಾಗಬೇಕು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಚುನಾವಣೆ ಎದುರಿಸಲಾಗುತ್ತಿದ್ದು, ಮುಂಬರುವ ಲೋಕಸಭೆ ಮತ್ತು ಜಿ.ಪಂ., ತಾ.ಪಂ. ಚುನಾವಣೆಗೆ ಪಕ್ಷವನ್ನು ಬಲವರ್ಧನೆಗೊಳಿಸಲು ರಾಜ್ಯಾದ್ಯಂತ ಪ್ರವಾಸ ನಡೆಸಲಾಗುತ್ತಿದೆ ಎಂದು ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪದಾಕಾರಿಗಳಾದ ಆರ್.ಮುನಿಯಪ್ಪ, ಕೆ.ಬಿ.ವಾಸು, ಶಿವಪುತ್ರಪ್ಪ ಗುಮಗೇರಿ, ಪ್ರಭು ದಳಪತಿ, ಎಂ.ಆರ್.ಭೇರಿ, ಬಸವರಾಜ ಭಂಡಾರಿ ಉಪಸ್ಥಿತರಿದ್ದರು.