ಜಿಲ್ಲೆ

ಕನ್ನಡ ರಾಜ್ಯೋತ್ಸವ ವ್ಯವಸ್ಥಿತವಾಗಿರಲಿ

ಗದಗ: ಜಿಲ್ಲೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಅಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೊಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ರಚಿಸಿದ ವಿವಿಧ ಸಮಿತಿಯವರು ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

1ರಂದು ಬೆಳಗ್ಗೆ 7.30ಕ್ಕೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜ್ ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭಗೊಂಡು ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಕಲಾ ತಂಡಗಳು, ವಿವಿಧ ಇಲಾಖೆಗಳ ಯೋಜನೆಗಳ ಕುರಿತ ಸ್ಥಬ್ಧಚಿತ್ರಗಳೊಂದಿಗೆ ಮೆರವಣಿಗೆ ಸಾಗಲಿದೆ. ಮೆರವಣಿಗೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜು ಮಕ್ಕಳು ಪಾಲ್ಗೊಳ್ಳಬೇಕು. ಈ ಕುರಿತು ಮೆರವಣಿಗೆ ಮೇಲುಸ್ತುವಾರಿ ಅಧಿಕಾರಿಗಳು ಕ್ರಮ ವಹಿಸಲು ಹೇಳಿದರು.

ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು ಎಂದರು.

ಪೊಲೀಸ್ ಪಡೆ, ಹೋಂಗಾರ್ಡ್, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಪಂ ಸಿಇಒ ಭರತ್ ಎಸ್. ಅವರು, ಶಿಷ್ಟಾಚಾರದನ್ವಯ ಅತಿಥಿ, ಗಣ್ಯರ ಆಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರು, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.