ಮದ್ದೂರು: ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಧ್ರುವಕುಮಾರ್ ತಿಳಿಸಿದರು.
ತಾಲೂಕಿನ ಕುದರಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸರ್ಕಾರದಿಂದ ಕೊಡುವ ಸಮವಸ್ತ್ರಗಳ ವಿತರಣೆ ಹಾಗೂ ವಿಶ್ವ ಪರಿಸರ ದಿನ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಬಿಸಿಯೂಟ, ಪಠ್ಯಪುಸ್ತಕ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆಯಬೇಕು ಎಂದು ಕಿವಿಮಾತು ಹೇಳಿದರು.
ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಎಲ್ಲರೂ ಒಂದೊಂದು ಸಸಿ ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಉಳಿಸಬೇಕು ಎಂದು ಮನವಿ ಮಾಡಿದರು.
ಮುಖ್ಯಶಿಕ್ಷಕಿ ಆಶಾ, ಶಿಕ್ಷಕ ಚಂದ್ರಶೇಖರ್, ಪುಷ್ಪಲತಾ ಇದ್ದರು.