ಹಾವೇರಿ: ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಿ. ಶಾಲೆ ಬಿಟ್ಟ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಕರೆತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಸಮನ್ವಯ ಹಾಗೂ ಪರಿಶೀಲನಾ ಸಭೆ, ಕೌಟಿಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದ ಅರಿವು ಮೂಡಿಸಿ. ಪಿಡಿಒ, ಸಿಡಿಪಿಒ ಹಾಗೂ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಕಾರ್ಯಕ್ರಮಗಳ ಆಯೋಜನೆಗೆ ಕ್ರಮವಹಿಸಬೇಕು. ಜತೆಗೆ ಕೆಳಹಂತದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕು ಎಂದು ಸೂಚಿಸಿದರು.
ಅಂಗನವಾಡಿಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರ್ಕಾರಿ ಜಮೀನು ಗುರುತಿಸಿ ಮಾಹಿತಿ ಸಲ್ಲಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ, ಸ್ವಾಧಾರ ಗೃಹ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ, ಸಖಿ ಒನ್ ಸ್ಟಾಫ್ ಸೆಂಟರ್, ಜಿಲ್ಲಾ ಮಟ್ಟದ ಸ್ವತಂತ್ರ ವಿಶೇಷ ಕಾರ್ಯಪಡೆ ಸಮಿತಿ, ಮಾನವ ಅಕ್ರಮ ಸಾಗಾಣಿಕೆ ಜಿಲ್ಲಾ ಮಟ್ಟದ ಸಮಿತಿ, ಫೋಷಣ ಅಭಿಯಾನ, ಉಜ್ವಲ ಯೋಜನೆ, ಮೆಟ್ರಿಕ್ ನಂತರ ಬಾಲಕಿಯರ ನಿಲಯ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಜಿಲ್ಲೆಯಲ್ಲಿ ಜನವರಿ-2022 ರಿಂದ ಮೇ-2023ರವರೆಗೆ 60 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಅಪೌಷ್ಟಿಕ ಮಕ್ಕಳನ್ನು ಎನ್.ಆರ್.ಸಿ.ಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಲಾಯಿತು. ಹಿರಿಯ ದಿವಾಣಿ ನ್ಯಾಯಾಧೀಶ ಪುಟ್ಟರಾಜು, ಜಿ.ಪಂ. ಸಿಇಒ ಅಕ್ಷಯ ಶ್ರೀಧರ, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಡಾ.ಪಿ.ಆರ್.ಹಾವನೂರ, ರೇಷ್ಮಾ ಕೌಸರ, ಉಮೇಶಪ್ಪ, ಜಯಶ್ರೀ ಪಾಟೀಲ ಇತರರಿದ್ದರು.
ಜಿಲ್ಲೆಯಲ್ಲಿ ಗುರುತಿಸಲಾದ ಅಪೌಷ್ಟಿಕ ಮಕ್ಕಳನ್ನು ಎನ್‌ಆರ್‌ಸಿಗೆ ದಾಖಲಿಸಿ ಪ್ರೋಟಿನ್ ಫುಡ್ ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಮಗು ಅಪೌಷ್ಟಿಕದಿಂದ ಬಳಲದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾವೇರಿ, ರಾಣೆಬೆನ್ನೂರ, ಹಿರೇಕೆರೂರು ಹಾಗೂ ಬ್ಯಾಡಗಿಯಲ್ಲಿ ಮಾತ್ರ ಎನ್‌ಆರ್‌ಸಿ ಕೇಂದ್ರಗಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್‌ಆರ್‌ಸಿ ಮಾದರಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.