ಸೋಮವಾರಪೇಟೆ : ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಅದನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಸಮಾಜದ ಎಲ್ಲರೂ ಕೈ ಜೋಡಿಸಬೇಕೆಂದು ಉದ್ಯಮಿ ಗಿರೀಶ್ ಮಲ್ಲಪ್ಪ ಹೇಳಿದರು.
ಐಗೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಹೆಚ್ಚು ಕಾಲ ಓದುವ ವಿದ್ಯಾರ್ಥಿಗಳು ಹಾಗೂ ಅಧ್ಯಯನದ ಮೂಲಕ ಅತ್ಯುನ್ನತ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ಗಳಿಗೆ ವಿಶ್ರಾಂತಿ ನೀಡಿ ಕಲಿಕೆಯ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ.ಮುರಳಿಧರ್, ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷ ಎಸ್.ಎಸ್.ಯೋಗೇಶ್, ಕಾಲೇಜು ಪ್ರಾಂಶುಪಾಲ ಎಚ್.ಕೆ. ಉಮೇಶ್, ಮುಖ್ಯ ಶಿಕ್ಷಕ ಎಂ.ಎಂ. ಯಶವಂತ್ ಕುಮಾರ್, ಶಿಕ್ಷಕ ಮಂಜುನಾಥ್, ಪತ್ರಕರ್ತ ಡಿ.ಪಿ.ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ಇದ್ದರು.
ಕಾರ್ಯಕ್ರಮದಲ್ಲಿ ಅಂಗವಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂವಿಧಾನ ಉಳಿವಿಗೆ ಪತ್ರಿಕೆಗಳ ಪಾತ್ರ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಚಿರುಶ್ರೀ ಪ್ರಥಮ ಸ್ಥಾನ ಪಡೆದರೆ. ದ್ವಿತೀಯ ಪಿಯು ವಿದ್ಯಾರ್ಥಿನಿ ಆರ್.ಯಶಸ್ವಿ (ದ್ವಿ) ಸ್ಥಾನ ಗಳಿಸಿದರು. ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿ ಎಚ್.ಆರ್.ರಮ್ಯಾ ಹಾಗೂ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ಪಿ.ಸಿ.ನಿಕ್ಷಿತಾ ಅವರನ್ನು ಸನ್ಮಾನಿಸಲಾಯಿತು.