ಜಿಲ್ಲೆ

ಕೆಂಪೇಗೌಡರ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ

ಮಂಜುನಾಥ ತಿಮ್ಮಯ್ಯ

ಮೈಸೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂ.27ರಂದು ಬೆಳಗ್ಗೆ 11.30ಗಂಟೆಗೆ ನಗರದ ಕಲಾಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.


ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೆಂಪೇಗೌಡ ಅವರ ಕೊಡುಗೆ ಹಾಗೂ ಸಾಧನೆಗೆ ಬೆಲೆ ಕಟ್ಟಲು ಆಗುವುದಿಲ್ಲ. ಆದರೂ ಅವರ ಆದರ್ಶ ಪಾಲಿಸಿ ಅದಕ್ಕೆ ಮೆರುಗು ತರುವಂತೆ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು.


ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಗೀತ ಗಾಯನವನ್ನು ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.


ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.