ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟದಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಮಾತನಾಡಿ, ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಮೇಷ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ. ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.
ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.
ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗದಷ್ಟು ಇರುವ ಅಹಿಂದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜತೆಗೆ ನಿರ್ದಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.
ನಗರಪಾಲಿಕೆ ಮಾಜಿ ಸದಸ್ಯ ಗೋಪಿ, ವಕೀಲರಾದ ಪುಟ್ಟಸಿದ್ದೇಗೌಡ, ವಿ ರಾಮಸ್ವಾಮಿ, ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪ ಕೋಟೆ, ಎಸ್‌ಡಿಪಿಐ ಮುಖಂಡ ಪುಟ್ನಂಜ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಆನಂದ್, ರಾಜ್ಯ ನಾಯಕರ ಸಂಘದ ಉಪಾಧ್ಯಕ್ಷ ಲೋಕೇಶ್, ಮುಖಂಡರಾದ ಶಿವಣ್ಣ, ಸುನೀಲ್, ಬಸವರಾಜ್, ಕೆಂಪಣ್ಣ, ರವಿ, ಮೋಹನ್, ಅಪ್ಪುಗೌಡ, ಜವರೇಗೌಡ, ರಮೇಶ, ಶಿವಕುಮಾರ್ ಇದ್ದರು.