ಎಂ.ಎಸ್.ರುದ್ರಗೌಡರ, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ 
ಜಿಲ್ಲೆ

ಆಲಿಕಲ್ಲು ಮಳೆಗೆ ದ್ರಾಕ್ಷಿ ಬೆಳೆ ಹಾನಿ ಪರಿಹಾರಕ್ಕೆ ಸಿಎಂ ಬೊಮ್ಮಾಯಿಗೆ ಪತ್ರ


ವಿಜಯಪುರ: ಅಕಾಲಿಕ ಆಲಿಕಲ್ಲು ಮಳೆಗೆ ದ್ರಾಕ್ಷಿ ಬೆಳೆ ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಎಂ.ಎಸ್.ರುದ್ರಗೌಡರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

ಮಾ.16 ರಂದು ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ವಿವಿಧೆಡೆ ಸುಮಾರು 1500ಕ್ಕೂ ಹೆಚ್ಚು ಹೆಕ್ಟರ್ ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಖಮಖಂಡಿ ತಾಲೂಕಿನಲ್ಲಿ ಅತೀ ಹೆಚ್ಚು ದ್ರಾಕ್ಷಿ ಬೆಳೆ ಹಾನಿಯಾಗಿದೆ. ಚಿಕ್ಕಲಕಿ ಗ್ರಾಮದ ಹಲವು ಜಮೀನುಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಿದ್ದೇನೆ.

ಈ ಅಕಾಲಿಕ ಮಳೆಯಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಎಕರೆಗೆ 2 ಲಕ್ಷಕ್ಕೂ ಹೆಚ್ಚು ವಾರ್ಷಿಕ ಖರ್ಚಾಗುತ್ತದೆ. ಈ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರದ ಅವಶ್ಯಕತೆಯಿದೆ. ಪರಿಹಾರ ಸಿಗದಿದ್ದರೆ ಮುಂದಿನ ವರ್ಷದ ನಿರ್ವಹಣೆಗೂ ತೊಂದರೆ ಆಗಲಿದೆ. ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ, ಎಲ್ಲೆಲ್ಲಿ ಹಾನಿಯಾಗಿದೆ ಎಂಬುದರ ವರದಿ ತರಿಸಿಕೊಂಡು, ಸೂಕ್ತ ಪರಿಹಾರ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.